ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

By
2 Min Read

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ (High Court of Karnataka) ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು (Vibhu Bakhru) ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಜೊತೆಗೆ ಹಲವಾರು ನ್ಯಾಯಮಂಡಳಿಗಳಲ್ಲಿ ಅಭ್ಯಾಸ ಮಾಡಿದ್ದಾರೆ. ಅವರು ಈ ವರ್ಷ ಜ.21 ರವರೆಗೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.

ಕರ್ನಾಟಕ ಹೈಕೋರ್ಟ್‌ ಮಾತ್ರ ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಸಹ ನೇಮಿಸಲಾಗಿದೆ. ಇದನ್ನೂ ಓದಿ: ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಸಚ್‌ದೇವ, ಜಾರ್ಖಂಡ್ ಹೈಕೋರ್ಟ್‌ಗೆ ತಾರ್‌ಲೋಕ್‌ ಸಿಂಗ್ ಚೌಹಾಣ್, ಗುವಾಹಟಿ ಹೈಕೋರ್ಟ್‌ಗೆ ಅಶುತೋಷ್ ಕುಮಾರ್, ಪಾಟ್ನಾ ಹೈಕೋರ್ಟ್‌ಗೆ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.

ನ್ಯಾ. ಭಕ್ರು ಪರಿಚಯ
ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಭಕ್ರು ಅವರು 1966ರಲ್ಲಿ ನಾಗ್ಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.

ನ್ಯಾ. ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂಗೊಂಡಿದ್ದರು.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕೊಲಿಜಿಯಂ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಈ ಮೇಲಿನ ಹೆಸರುಗಳನ್ನು ಶಿಫಾರಸು ಮಾಡಿತ್ತು. ಇದನ್ನೂ ಓದಿ: ಡಿವೋರ್ಸ್‌ ಕೇಸ್‌| ಸಂಗಾತಿ ರೆಕಾರ್ಡ್ ಮಾಡಿದ ಕರೆಯನ್ನು ಸಾಕ್ಷಿಯಾಗಿ ಪರಿಗಣಿಸಬಹುದು – ಸುಪ್ರೀಂ

Share This Article