ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್

Public TV
2 Min Read

ಹಾಸನ: ಗಣೇಶ ಮೆರವೆಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ದುರಂತ ಸಂಭವಿಸಿದ ಹಿನ್ನೆಲೆ ಮೊಸಳೆಹೊಸಳ್ಳಿ (MosaleHosalli) ಮದಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತಾಗಿ ಬಂದ್ ಮಾಡಿದ್ದಾರೆ.

ಮೊಸಳೆಹೊಸಳ್ಳಿ ಗ್ರಾಮದಲ್ಲಿ ಘಟನೆ ನಡೆದ ಸ್ಥಳಕ್ಕೆ ನೂರಾರು ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಹೀಗಾಗಿ ವರ್ತಕರು ಕೂಡ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತಾಗಿ ಬಂದ್ ಮಾಡಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದೆ.ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಪ್ರಧಾನಿ ಮೋದಿ ಸಂತಾಪ

ಏನಿದು ಘನಘೋರ ದುರಂತ?
ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಗಣೇಶ ಮೆರವಣಿಗೆ ವೇಳೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ.

ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಗಾಯಾಳುಗಳಿಗೆ ಹಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪೊಲೀಸರ ವೈಫಲ್ಯದಿಂದಲೇ ದುರಂತ
ಇದು ಪೊಲೀಸರ ವೈಫಲ್ಯದಿಂದಾಗಿರುವ ಘಟನೆ ಎಂದು ಶಾಸಕ ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ. ಇನ್ನು ಸಂಸದ ಶ್ರೇಯಸ್ ಪಟೇಲ್ ಪ್ರತಿಕ್ರಿಯಿಸಿ, ಇದೊಂದು ಕರಾಳ ದಿನ. ಎಲ್ಲಿಂದ ಲೋಪ ಆಗಿದೆ ಅಂತ ತಿಳಿಸಲು ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ:ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

Share This Article