ಮೈಸೂರು: ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಕೊಡಗು ಹೆದ್ದಾರಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಿಮೆಂಟ್ ಲಾರಿ ಪಲ್ಟಿಯಾಗಿದೆ. ಅಪಘಾತಕ್ಕೊಳಗಾದ ಎರಡೂ ವಾಹನಗಳು ಕೇರಳ ಮೂಲದ್ದಾಗಿದೆ.
ಇದೀಗ ಮೃತದೇಹಗಳು ಹುಣಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.