ಜಾತಿಗಣತಿಯಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ

Public TV
2 Min Read

– 45 ನಿಮಿಷಕ್ಕೂ ಹೆಚ್ಚು ಸಮಯ ಗಣತಿದಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ (Caste Census) ಸಿಎಂ ಸಿದ್ದರಾಮಯ್ಯ (Siddaramaiah) ಗುರುವಾರ ಪಾಲ್ಗೊಂಡು ಮಾಹಿತಿ ನೀಡಿದ್ದಾರೆ.

ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಇದನ್ನೂ ಓದಿ: ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಸಿದ್ದರಾಮಯ್ಯ

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ತಿಳಿಸಿದ್ದಾರೆ.

ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ಜನತೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮೂಗುದಾರ

Share This Article