ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ನಿಧನ – ಸಿದ್ರಾಮಯ್ಯ, ದೇವೇಗೌಡ, ರಾಹುಲ್‌ ಗಾಂಧಿ ಸೇರಿ ಗಣ್ಯರಿಂದ ಸಂತಾಪ

4 Min Read

ಬೆಂಗಳೂರು/ದಾವಣಗೆರೆ: ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ
(Shamanur Shivashankarappa) ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah), ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ, ʻಕೈʼ ನಾಯಕ ರಾಹುಲ್‌ ಗಾಂಧಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಧಿಕಾರವನ್ನ ಜನಕಲ್ಯಾಣಕ್ಕೆ ಮುಡಿಪಾಗಿಟ್ಟವರು: ಸಿದ್ದರಾಮಯ್ಯ
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಶೋಕ ವ್ಯಕ್ತಪಡಿಸಿದ್ದಾರೆ.

ಸುಧೀರ್ಘ ಜನಸೇವೆ ಸದಾ ಸ್ಮರಣೀಯ: ಹೆಚ್‌ಡಿಡಿ
ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಅವರ ಸರಳತೆ ಮತ್ತು ಸಾರ್ವಜನಿಕ ಜೀವನದಲ್ಲಿ ಅವರ ಸುಧೀರ್ಘ ಜನಸೇವೆ ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್‌.ಡಿ ದೇವೇಗೌಡರು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ರಾಹುಲ್‌, ಖರ್ಗೆ ಸಂತಾಪ
ಇನ್ನೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಹ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೂರವಾಣಿ ಕರೆ ಮೂಲಕ ಕುಟುಂಬಸ್ಥರೊಂದಿಗೆ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಸಂತಾಪ ಸೂಚಿಸಿದ್ದಾರೆ.

ಜಿ.ಪರಮೇಶ್ವರ್‌
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು ಇಂದು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು. ಸೈದ್ಧಾಂತಿಕವಾಗಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ, ನೇರನುಡಿಯ ನಾಯಕರಾಗಿದ್ದರು. ಶಿಕ್ಷಣ, ಸಂಘಟನೆ, ಸಮಾಜ ಸೇವೆಗಾಗಿ ತಮ್ಮ ಇಡೀ ಜೀವನವನ್ನೇ ಸವೆಸಿದ್ದರು. ನಮ್ಮ ಕುಟುಂಬಕ್ಕೆ ಆತ್ಮೀಯರಾಗಿದ್ದ ಅವರು ನನಗೆ ವೈಯಕ್ತಿಕವಾಗಿ ಸದಾ ಹಿತ ಬಯಸುತ್ತಿದ್ದರು. ಅವರ ಅಗಲಿಕೆಯು ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ, ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಪ್ರಹ್ಲಾದ್‌ ಜೋಶಿ
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕರು, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರು, ಮಾಜಿ‌ ಸಚಿವರು, ಹಿರಿಯ ರಾಜಕಾರಣಿ, ಸಮಾಜ ಸೇವೆ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶಾಮನೂರು ಶಿವಶಂಕರಪ್ಪನವರು ನಿಧನರಾದ ಸುದ್ದಿ ನಿಜಕ್ಕೂ ನೋವಿನ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿ ಕೊಡಲೆಂದು, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.

ಡಾ.ಸಿ.ಎನ್‌ ಮಂಜುನಾಥ್‌
ಹಿರಿಯ ರಾಜಕಾರಣಿಯನ್ನ ಕಳೆದು ಕೊಂಡು ತುಂಬಾ ನೋವಾಗಿದೆ. ತುಂಬಾ ಒಳ್ಳೆ ವ್ಯಕ್ತಿ, ಮತ್ತು ಕರುಣಾಮಯಿಯಾಗಿದ್ರು. ಯಾವತ್ತೂ ಕೂಡ ಅವರು ಸ್ವಾಭಿಮಾನಿ ಬಿಟ್ಟುಕೊಟ್ಟವರಲ್ಲ. ರಾಜಿಕೀಯ ಲ್ಲಿ ಅವರ ಸಾಧನೆ ಮರೆಯುವುದಕ್ಕೆ ಆಗಲ್ಲ. ಸಾಕಷ್ಟು ವಿದ್ಯಾರ್ಥಿಗಳಿಗೆ ಆಶಾಕಿರಣ ಆಗಿದ್ರು. ಅವರ ಮನಸ್ಸು ದಾರಾಳ, ನಮ್ಮ ರಾಜಿಕೀಯಕ್ಕೆ ತುಂಬಲಾರದ ನಷ್ಟ ಆಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ.

Share This Article