ಚಿನ್ನಸ್ವಾಮಿಯಲ್ಲಿ ಪಂದ್ಯಕ್ಕೆ ಅನುಮತಿ ಇಲ್ಲ- ಬೆಂಗಳೂರು ಪೊಲೀಸ್‌

1 Min Read

ಬೆಂಗಳೂರು: ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ (Delhi) ಮತ್ತು ಆಂಧ್ರಪ್ರದೇಶ (Andhra Pradesh) ನಡುವಿನ ವಿಜಯ್ ಹಜಾರೆ (Vijay Hazare) ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

ಪಂದ್ಯ ನಡೆಸುವ ಸಂಬಂಧ ಸೋಮವಾರ ಬೆಂಗಳೂರು ಆಯುಕ್ತ ಸೀಮಂತ್‌ ಕುಮಾರ್‌, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಅಧಿಕಾರಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಪರಿಶೀಲನೆಯ ಬಳಿಕ ಈ ತಂಡ ಸರ್ಕಾರಕ್ಕೆ ವರದಿ ನೀಡಿತ್ತು. ಅಂತಿಮವಾಗಿ ಬೆಂಗಳೂರು ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದಾರೆ.

ಅನುಮತಿ ನಿರಾಕರಣೆ ಯಾಕೆ?
ಸ್ಟೇಡಿಯಂನಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಅಳವಡಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಬಂದಿದೆ. ಜೊತೆಗೆ ನಾಳೆ ಮ್ಯಾಚ್‌ಗೆ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಹೊರಭಾಗದಲ್ಲಿ ಅಭಿಮಾನಿಗಳು ಸೇರುವ ಆತಂಕ ವ್ಯಕ್ತವಾಗಿದೆ.

ಸ್ಟೇಡಿಯಂ ಗೇಟ್ ಹೊರಭಾಗದಲ್ಲಿಯೇ ಕಾಲ್ತುಳಿತ ದುರಂತ ಸಂಭವಿಸಿತ್ತು. ಹೀಗಾಗಿ ನಾಳೆ ಮತ್ತಷ್ಟು ಅಭಿಮಾನಿಗಳು ಸೇರಿದರೆ ಕಷ್ಟ ಅನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಗೇಟ್ ಅಗಲೀಕರಣ ಮತ್ತು ಜನ ಒಡಾಡಲು ಅನುಕೂಲವಾಗುವ ವಾತಾವರಣವನ್ನು ಸ್ಟೇಡಿಯಂ ನಿರ್ಮಾಣ ಮಾಡದ ಕಾರಣ ಪೊಲೀಸರು ಪಂದ್ಯ ಆಯೋಜನೆಗೆ ಅನುಮತಿ ನೀಡಿಲ್ಲ.

ಬುಧವಾರ ದೆಹಲಿ ಮತ್ತು ಆಂಧ್ರಪ್ರದೇಶದ ಮಧ್ಯೆ ಮೊದಲ ಪಂದ್ಯ ನಿಗದಿಯಾಗಿತ್ತು. ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli) ದೆಹಲಿ ಪರ ಕಣಕ್ಕೆ ಇಳಿಯಬೇಕಿತ್ತು.

ಪ್ರೇಕ್ಷಕರಿಗೆ ಅವಕಾಶ ಇಲ್ಲದೇ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮುಖ್ಯಸ್ಥ ವೆಂಕಟೇಶ್‌ ಪ್ರಸಾದ್‌ ಗೃಹ ಸಚಿವ ಪರಮೇಶ್ವರ್‌ ಅವರಲ್ಲಿ ಮನವಿ ಮಾಡಿದ್ದರು.

ಕಳೆದ ಜೂನ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು. ಇದೇ ಕಾರಣದಿಂದ ಮಹಿಳಾ ವಿಶ್ವಕಪ್ ಪಂದ್ಯ ಕೂಡ ಕೈತಪ್ಪಿತ್ತು.

Share This Article