ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

1 Min Read

ಕಲಬುರಗಿ: ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗುತ್ತದೆ ಎಂಬುದೆಲ್ಲ ಬರಿ ಊಹಾಪೋಹ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಕಾರಣಕ್ಕೂ ಬದಲಾವಣೆಯಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ರಾಜ್ಯದ ಅಭಿವೃದ್ಧಿಗೆ ಬುನಾದಿ ಹಾಕಿಕೊಟ್ಟಿದ್ದರು. ಸಿದ್ದರಾಮಯ್ಯ ಅವರು ಆ ಬುನಾದಿಯ ಮೇಲೆ ಸುಭದ್ರವಾದ ಮನೆಯನ್ನು ಕಟ್ಟಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ವರ್ಗದವರಿಗೂ ಸಮಾನತೆ ತಂದಿರುವ ಅವರು, ಪೂರ್ಣ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಇರಲಿದ್ದಾರೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಬದಲಾವಣೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಮಗೊಂದು ಹೈಕಮಾಂಡ್ ಇದೆ. ಯಾರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಅಥವಾ ಯಾರು ಇಳಿಯಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ನಮಗೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದೆ. ಈ ವಿಚಾರವನ್ನು ನಮಗೆ ಬಿಡಿ’ ಎಂದು. ಹಾಗಾಗಿ ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಸಿದ್ದರಾಮಯ್ಯ ಅವರು ಕೂಡ ಹೈಕಮಾಂಡ್ ಸೂಚನೆಯನ್ನು ಮೀರದಂತೆ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜ್ಯ ರಾಜಕಾರಣದಲ್ಲಿ ಯಾವುದೇ ಅಸ್ಥಿರತೆ ಇಲ್ಲ ಹಾಗೂ ಸರ್ಕಾರದ ಗಮನ ಕೇವಲ ಜನಪರ ಕೆಲಸಗಳ ಕಡೆಗೆ ಇದೆ ಎಂದು ಮುನಿಯಪ್ಪ ಅವರು ಇದೇ ಸಂದರ್ಭದಲ್ಲಿ ಪುನರುಚ್ಚರಿಸಿದರು.

Share This Article