ಅಧಿಕಾರಿ ಮೇಲೆ ಸಿಎಂ ಶಿಸ್ತು ಕ್ರಮದ ಎಚ್ಚರಿಕೆ – ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್‌?

1 Min Read

ಬೆಂಗಳೂರು: ಇಂಧನ ಸಚಿವ ಕೆಜೆ ಜಾರ್ಜ್‌ (KJ George) ರಾಜೀನಾಮೆಗೆ ಮುಂದಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಹೌದು. ವಾರದ ಹಿಂದೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು (CM Siddaramaiah) ಭೇಟಿ ಮಾಡಿದ್ದ ಜಾರ್ಜ್‌ ಅವರು ಹಿರಿಯ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ (Pankaj Kumar Pandey) ವಿರುದ್ದ ಶಿಸ್ತು ಕ್ರಮಕ್ಕೆ ಸೂಚಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ವ್ಯವಸ್ಥಾಪಕ ನಿರ್ದೇಶಕರಾಗಿ (MD) ಕೆಲಸ ಮಾಡುತ್ತಿರುವ ಪಂಕಜ್‌ ಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ನಾನೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಜಾರ್ಜ್‌ ಅವರು ರಾಜೀನಾಮೆ ಮಾತನ್ನು ಆಡುತ್ತಿದ್ದಂತೆ ಸಿಎಂ ಸಮಾಧಾನ ಮಾಡಿ ಅವರನ್ನು ಕಳಹಿಸಿದ್ದರು.

ಕೆಪಿಟಿಸಿಎಲ್‌ ಎಂಡಿ ಮತ್ತು ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಇ-ಆಡಳಿತ) ಹುದ್ದೆಯನ್ನು ಹೊಂದಿರುವ ಪಂಕಜ್‌ ಕುಮಾರ್‌ ಪಾಂಡೆ ವಿರುದ್ಧ ಹಲವು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಪಡೆಯಲು ಮುಖ್ಯಮಂತ್ರಿಗಳ ಕಚೇರಿಯಿಂದ ಭೇಟಿಗೆ ಆಹ್ವಾನ ನೀಡಲಾಗಿತ್ತು. ಆದರೆ ಸಿಎಂ ಕಚೇರಿಯಿಂದ ಅಧಿಕೃತ ಮಾಹಿತಿ ತಲುಪಿದ್ದರೂ ಸಹ ಪಂಕಜ್ ಕುಮಾರ್ ಪಾಂಡೆ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು.

ಹಿರಿಯ ಅಧಿಕಾರಿಯ ಈ ನಡೆಯನ್ನು ಸಿಎಂ ಕಚೇರಿ ಗಂಭೀರವಾಗಿ ಪರಿಗಣಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪಂಕಜ್ ಕುಮಾರ್ ಪಾಂಡೆ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದರು. ‘ನೋಟಿಸ್ ನೀಡಿದ ದಿನವೇ ಲಿಖಿತ ವಿವರಣೆ ನೀಡಬೇಕು’ ಎಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿತ್ತು.  ಸರ್ಕಾರದ ಈ ನೋಟಿಸ್‌ಗೆ ಜಾರ್ಜ್‌ ಅಸಮಾಧಾನಗೊಂಡಿದ್ದರು ಎನ್ನಲಾಗುತ್ತಿದೆ.

Share This Article