ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲು ಈಗ ಸಾಧ್ಯವಿಲ್ಲ: ಎಚ್‍ಡಿಡಿ

Public TV
1 Min Read

ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈಗ ಗ್ರಾಮ ವಾಸ್ತವ್ಯ ಹೂಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಅಧಿಕಾರಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಹತ್ತು- ಹಲವಾರು ಸಮಸ್ಯೆಗಳಿವೆ. ಅವೆಲ್ಲವನ್ನು ನಿಭಾಯಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಸರ್ಕಾರದ ಸಮಸ್ಯೆಗಳನ್ನು ಸರಿದೂಗಿಸಿಕೊಂಡು ಹೋಗಲು ಸಮಯವಿಲ್ಲ. ಆದ್ದರಿಂದ ಈಗ ಗ್ರಾಮ ವಾಸ್ತವ್ಯ ಮಾಡಲು ಸಾಧ್ಯವಿಲ್ಲ ಎಂದು ದೇವೇಗೌಡರು ಸ್ಪಷ್ಟ ಪಡಿಸಿದ್ದಾರೆ.

ನನಗೆ ನನ್ನ ಪಕ್ಷವನ್ನ ಉಳಿಸಿಕೊಳ್ಳವುದು ಮುಖ್ಯವಾಗಿದೆ. ಕಳೆದ ಚುನಾವಣೆಯಲ್ಲಿ 17 ಜಿಲ್ಲೆಯಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಸ್ಥಳೀಯ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ನಮ್ಮ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಷ್ಟು ಸೀಟು ಬರುತ್ತವೆ ಎಂಬುದು ಖಚಿತವಾಗಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದರಿಂದ ಪಕ್ಷ ಸಂಘಟನೆ ಮಾಡಲು ಸಮಯ ಸಿಗುವುದಿಲ್ಲ. ಇದರಿಂದ ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ. ನನ್ನ ಕಾಲದಲ್ಲಿ ಅನೇಕ ಅಭಿವೃದ್ಧಿ ಆಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಸಚಿವ ಸ್ಥಾನ ಕೊಟ್ಟಿದ್ದರು? ಎಚ್.ಕೆ.ಪಾಟೀಲ್ ಈಗ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಅವರು ಈ ಹಿಂದೆ ಸಚಿವರಾಗಿದ್ದಾಗ ತಮ್ಮ ಗದಗ ಜಿಲ್ಲೆಗೆ ಎಷ್ಟು ಹಣ ನೀಡಿದ್ದಾರೆಂದು ಹೇಳಲಿ. ಉತ್ತರ ಕರ್ನಾಟಕಕ್ಕೆ ಯಾವುದೇ ತಾರತಮ್ಯ ಆಗಿಲ್ಲ. ಭಾಷಾವಾರು ಪ್ರಾಂತ್ಯದ ನಂತರ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ ಲೆಕ್ಕ ತರಿಸುತ್ತೇನೆ ಎಂದು ಹೇಳಿದರು.

ನಾವು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ. ಬಜೆಟ್ ನಲ್ಲಿ ಉತ್ತರ ಕರ್ನಾಟಕ ರೈತರು ಹೆಚ್ಚಿನ ಲಾಭ ಪಡೆಯುತ್ತಾರೆ. ಹಾಗೇ ಬೆಳಗಾವಿ ಜಿಲ್ಲೆಗೆ ಸಿಂಹಪಾಲು ಬಂದಿದೆ. ಬೇಕಾದರೆ ವಿಧಾನಸಭೆ ಅಧಿವೇಶನದಲ್ಲಿ 1956ರಿಂದ ಈವರೆಗಿನ ಸಿಎಂಗಳು ಎಷ್ಟು ಅನುದಾನ ನೀಡಿದ್ದಾರೆ ಎನ್ನುವ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಹೇಳುತ್ತೇನೆ ಅಂದ್ರು.

Share This Article
Leave a Comment

Leave a Reply

Your email address will not be published. Required fields are marked *