ಫೈನಲ್ ಆಯ್ತು ರಾಮನಗರ ಬಿಜೆಪಿ ಅಭ್ಯರ್ಥಿ ಹೆಸ್ರು

Public TV
1 Min Read

ರಾಮನಗರ: ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪನವರ ಪುತ್ರ ಚಂದ್ರಶೇಖರ್‌ಗೆ ರಾಮನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಖಚಿತವಾಗಿದೆ.

ಹೌದು, ಈಗಾಗಲೇ ಚಂದ್ರಶೇಖರ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿ-ಫಾರ್ಮ್ ನೀಡಿದ್ದು, ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ಅವರ ಸಮ್ಮತದ ಮೇರೆಗೆ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚನ್ನರಾಯಪಟ್ಟಣ ವಿಧಾನಸಭಾ ಕ್ಷೇತ್ರವನ್ನು ತಮ್ಮ ಬಳಿ ಉಳಿಸಿಕೊಂಡು, ರಾಮನಗರ ಕ್ಷೇತ್ರವನ್ನು ತೆರವುಗೊಳಿಸಿದ್ದರು. ಹೀಗಾಗಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಪ್ರತಿಷ್ಠೆಯ ಕಣವಾಗಿರುವ ಜಿಲ್ಲೆಯಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿತ್ತು. ಅಲ್ಲದೇ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪನವರ ಪುತ್ರ ಚಂದ್ರಶೇಖರ್ ಪಕ್ಷ ತೊರೆದು ಬಿಎಸ್‍ವೈ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಬಿಜೆಪಿ ಸೇರ್ಪಡೆಯಾಗಿ ಮಾತನಾಡಿದ್ದ ಅವರು, ನನ್ನ ಆತ್ಮ ತೃಪ್ತಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣ ಇದೆ. ನಮ್ಮ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡುವುದು ನನ್ನ ಗುರಿಯಾಗಿದೆ. ನನ್ನೊಂದಿಗೆ ಕ್ಷೇತ್ರದ ಹಲವು ಮುಖಂಡರು ಸಹ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಬಿಜೆಪಿ ಪಕ್ಷವನ್ನು ಕ್ಷೇತ್ರದಲ್ಲಿ ಬಲಗೊಳಿಸುವತ್ತ ಗಮನಹರಿಸುತ್ತೇನೆ ಎಂದಿದ್ದರು.

ಚಂದ್ರಶೇಖರ್ ಬಿಜೆಪಿಗೆ ಸೇರುವ ಮುನ್ನ ಮಾತನಾಡಿದ್ದ ಸಿ.ಎಂ. ಲಿಂಗಪ್ಪ, ರಾಮನಗರ ಉಪಚುನಾವಣೆಯಲ್ಲಿ ಬಿಜೆಪಿಗೆ ನಾವು ಬೆಂಬಲ ನೀಡುವುದಿಲ್ಲ. ಇತ್ತ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ. ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಆಲೋಚನೆಯನ್ನು ಕೈಬಿಟ್ಟಿಲ್ಲ ಎಂದು ಹೇಳಿ ರಾಮನಗರ ಮೈತ್ರಿಗೆ ಸಿ.ಎಂ.ಲಿಂಗಪ್ಪ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಈ ಎಲ್ಲದರ ನಡುವೆ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *