ಲೋಕ ಸಮರಕ್ಕೆ ರಣಕಹಳೆ ಊದಲು ಬಿಎಸ್‍ವೈ ಸಿದ್ಧತೆ

Public TV
1 Min Read

ಶಿವಮೊಗ್ಗ: 2019ರ ಲೋಕಸಭಾ ಚುಣಾವಣೆಗೆ ರಾಜ್ಯ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ರಣಕಹಳೆ ಊದಲು ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಬಿಎಸ್‍ವೈ, ಜನವರಿ 11 ಹಾಗೂ 12ರಂದು ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯದ ಸಂಸದರು ಹಾಗೂ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸಭೆಗೆ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸಭೆಯಲ್ಲಿ ಲೋಕಸಭಾ ಕ್ಷೇತ್ರಗಳ ಇಂದಿನ ಸ್ಥಿತಿ-ಗತಿಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಬಳಿಕ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಗೆ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಪ್ರವಾಸದ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಇದೇ ವೇಳೆ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಎಸ್‍ವೈ, ದೋಸ್ತಿ ಸರ್ಕಾರ ಎರಡು ಪಕ್ಷಗಳಲ್ಲಿ ಎಲ್ಲವೂ ಸರಿಯಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ದಿನೇ ದಿನೇ ಈ ಗೊಂದಲ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಬರಗಾಲ ಉಂಟಾಗಿ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಲು ಯಾವ ಸಚಿವರು ತಯಾರಿಲ್ಲ. ಸರ್ಕಾರದ ಸಚಿವರುಗಳಲ್ಲಿ ಒಬ್ಬರ ಮುಖ ಒಬ್ಬರು ನೋಡಲು ಆಗದ ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ನಿಗಮ ಮಂಡಳಿ ಕಚ್ಚಾಟ, ಲೋಕಸಭೆಗೆ ಯಾರು ಸ್ಪರ್ಧಿಸಬೇಕು ಎಂಬುವುದರ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದ್ದು, ಇಬ್ಬರ ಕಚ್ಚಾಟ, ಕಿತ್ತಾಟ ಮಧ್ಯೆ ರಾಜ್ಯದ ಅಭಿವೃದ್ಧಿ ಮತ್ತು ಬರಗಾಲದ ಬಗ್ಗೆ ಚಿಂತಿಸಲು ಇವರಿಗೆ ಸಮಯವಿಲ್ಲದಂತಾಗಿದೆ ಎಂದು ಟೀಕಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *