ಬೆಂಗಳೂರು: ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಷಯವಾಗಿ ಆರ್ಎಸ್ಎಸ್ ಮುಖಂಡರಲ್ಲೇ ಭಿನ್ನಮತ ಸ್ಫೋಟಗೊಂಡಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ನಳೀನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಬಾರದು ಎಂಬ ಮಾತುಗಳು ಬಿಜೆಪಿ ಅಂಗಳದಲ್ಲಿ ಕೇಳಿಬರುತ್ತಿವೆ. ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿದ್ದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಟಿಕೆಟ್ ಹಂಚಿಕೆ ಕುರಿತು ಚರ್ಚಿಸಿದ್ದಾರೆ. ಈ ವೇಳೆ ಹಾಲಿ ಸಂಸದರಾಗಿರುವ ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಬೇಡವೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ.
ಇತ್ತ ಕಟೀಲ್ ಪರವಾಗಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬ್ಯಾಟಿಂಗ್ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಡಾ.ಸುಧೀರ್ ಹೆಗ್ಡೆ ಮತ್ತು ಕ್ಯಾಪ್ಟನ್ ಬ್ರಿಜೇಶ್ ಚೌಟ ಹೆಸರನ್ನೂ ರಾಜ್ಯ ನಾಯಕರು ಹೈಕಮಾಂಡ್ಗೆ ಶಿಫಾರಸ್ಸು ಮಾಡಿದ್ದು, ಸೋಮವಾರ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.