ರಾಜಸ್ಥಾನದಿಂದ ಮನಮೋಹನ್ ಸಿಂಗ್ ರಾಜ್ಯಸಭೆಗೆ ಆಯ್ಕೆ

Public TV
1 Min Read

ಜೈಪುರ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜಸ್ಥಾನದ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಬಿಜೆಪಿಯಿಂದ ಆಯ್ಕೆಯಾಗಿದ್ದ ಮದನ್ ಲಾಲ್ ಸೈನಿ ಅವರು ಜೂನ್‍ನಲ್ಲಿ ನಿಧನರಾಗಿದ್ದರು. ಅವರ ನಿಧನದಿಂದ ತೆರುವಾಗಿದ್ದ ಸ್ಥಾನಕ್ಕೆ ಆಗಸ್ಟ್ 26ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ 2019ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರದಲ್ಲಿದೆ. ಹೀಗಾಗಿ ಬಿಜೆಪಿಯು ಮನಮೋಹನ್ ಸಿಂಗ್ ಅವರ ವಿರುದ್ಧ ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಹಿಂದೇಟು ಹಾಕಿತು. ಇದರಿಂದಾಗಿ ಉಪ ಚುನಾವಣೆಗೂ ಮುನ್ನವೇ ಮನಮೋಹನ್ ಸಿಂಗ್ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಅವರು, ರಾಜ್ಯದಿಂದ ವಿಧಾನಸಭೆಗೆ ಆಯ್ಕೆಯಾದ ಮನಮೋಹನ್ ಸಿಂಗ್ ಅವರಿಗೆ ಅಭಿನಂದನೆಗಳು. ಅವರು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವುದು ನಮಗೆ ಹೆಮ್ಮೆಯ ವಿಚಾರ. ಅವರ ಅಪಾರ ಜ್ಞಾನ ಹಾಗೂ ಅನುಭವವು ರಾಜಸ್ಥಾನದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಅಸ್ಸಾಂನಿಂದ ರಾಜ್ಯಸಭಾ ಸದಸ್ಯರಾಗಿದ್ದ ಡಾ.ಮನಮೋಹನ್ ಸಿಂಗ್ ಅವರು ರಾಜ್ಯಸಭೆ ಸದಸ್ಯರಾಗಿ ಹೆಚ್ಚು ಸಮಯ ಕಳೆದಿದ್ದಾರೆ. 1991ರಲ್ಲಿ ಅಸ್ಸಾಂನಿಂದ ಚುನಾಯಿತರಾದ ನಂತರ ಆಗಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮನಮೋಹನ್ ಸಿಂಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಅವರಿಗೆ ಹೊಣೆಗಾರಿಕೆ ನೀಡಿದ್ದರು. ಈ ಬಾರಿಯ ಆಯ್ಕೆ ಸೇರಿದಂತೆ ಅವರು ಒಟ್ಟು ಐದು ಅವಧಿಗೆ ರಾಜ್ಯಸಭೆ ಸದಸ್ಯರಾಗಿ, ಎರಡು ಬಾರಿ ಪ್ರಧಾನ ಮಂತ್ರಿಯಾಗಿದ್ದಾರೆ.

ಜೂನ್‍ನಲ್ಲಿ ಅವರ ರಾಜ್ಯಸಭೆಯ ಅವಧಿ ಕೊನೆಗೊಂಡಿತ್ತು. ಆದರೆ ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಬಲ ಕಡಿಮೆಯಾದ ಕಾರಣ ಕಾಂಗ್ರೆಸ್ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಕೇವಲ 25 ಶಾಸಕರನ್ನು ಹೊಂದಿದೆ.

Share This Article
Leave a Comment

Leave a Reply

Your email address will not be published. Required fields are marked *