ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ- ಕದ್ರಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

Public TV
3 Min Read

– 150ಕ್ಕೂ ಹೆಚ್ಚು ಮನೆಗಳು ಜಲಾವೃತ
– ಮೀನುಗಾರಿಗೆ ಸ್ತಬ್ಧ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಕರಾವಳಿ ತಾಲೂಕುಗಳ ಅನೇಕ ಹಳ್ಳಿಗಳು ಜಲಾವೃತವಾಗಿವೆ.

ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಯಲ್ಲಾಪುರ ತಾಲೂಕಿನ ತಗ್ಗು ಪ್ರದೇಶಗಳಿಗೆ ಗಂಗಾವಳಿ, ಅಘನಾಶಿನಿ, ಬೇಡ್ತಿ ನದಿ ನೀರು ನುಗ್ಗಿದೆ. ಗಂಗಾವಳಿ ನದಿ ಪ್ರವಾಹದಿಂದ ಅಂಕೋಲಾ ತಾಲೂಕಿನ ವಾಸರಕುದ್ರಗಿ ಹಳ್ಳಿ ಸಂಪೂರ್ಣ ಜಲಾವೃತವಾಗಿದ್ದು, 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ಜನರನ್ನು ದೋಣಿ ಮೂಲಕ ರಕ್ಷಣೆ ಮಾಡಲಾಗುತ್ತಿದೆ.

ಹಲವು ಮನೆಗಳಲ್ಲಿ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, ದಾಖಲೆಗಳು ನೀರುಪಾಲಾಗಿದ್ದು ಗ್ರಾಮದಲ್ಲಿ ಐದು ಪರಿಹಾರ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸ್ಥಳಕ್ಕೆ ಕಾರವಾರದ ಶಾಸಕಿ ರೂಪಾಲಿ ನಾಯ್ಕ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಅಂಕೋಲ-ಯಲ್ಲಾಪುರ ರಸ್ತೆ ಬಂದ್: ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಜಿಲ್ಲೆಯ ಹುಬ್ಬಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿ 63ರ ಸುಂಕಸಾಳ ಬಳಿ ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಗಿದೆ. ಇಲ್ಲಿನ ಹೆಗ್ಗಾರ್, ಡೋಂಗ್ರಿ, ರಾಮನಗುಳಿ, ಸುಂಕಸಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನದಿನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇದಲ್ಲದೇ ಮಳೆ ಅಬ್ಬರ ಹೆಚ್ಚಾದ್ದರಿಂದ ಅಂಕೋಲ-ಯಲ್ಲಾಪುರ ರಸ್ತೆಯನ್ನು ಬಂದ್ ಮಾಡಲಾಗಿದೆ.

ಮೀನುಗಾರಿಕೆ ಸ್ತಬ್ಧ: ಜಿಲ್ಲೆಯ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸುರಿಯುತ್ತಿರುವ ಮಳೆಗೆ ಜನ ಕಂಗಾಲಾಗಿದ್ದಾರೆ. ಮನೆಯಿಂದ ಹೊರ ಬರದ ಸ್ಥಿತಿ ನಿರ್ಮಾಣ ವಾಗಿದೆ. ತಗ್ಗು ಪ್ರದೇಶಗಳು ಜಲಾವೃತ್ತವಾಗಿ ಅಪಾಯ ತಂದಿರಿಸಿದೆ. ಭಾರೀ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು ಜನರನ್ನು ಆತಂಕಕ್ಕೆ ದೂಡಿದೆ. ಜಿಲ್ಲೆಯ ಕರಾವಳಿಯಲ್ಲಿ ಸಮುದ್ರದ ಅಲೆಗಳ ರೌದ್ರ ನರ್ತನಕ್ಕೆ ಮೀನುಗಾರರ ಸ್ಥಿತಿ ಅಯೋಮಯವಾಗಿದೆ. ಸಮುದ್ರ ಆಳೆತ್ತರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದೆ. ಬಹುತೇಕ ಕಡೆ ಕಡಲ ಕೊರೆತ ಉಂಟಾಗಿ ಸಮುದ್ರದ ನೀರು ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ.

ಜಿಲ್ಲೆಯ ಕರಾವಳಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣ ಸ್ಥಗಿತವಾಗಿದೆ. ಹೊಸ ಆಸೆ ಹೊಸ ಕನಸಿನೊಂದಿಗೆ ಆರಂಭವಾದ ಈ ವರ್ಷದ ಮೀನುಗಾರಿಕೆ ಹಂಗಾಮಿಗೆ ಆರಂಭದಲ್ಲಿಯೇ ಪ್ರಕೃತಿ ಭಾರೀ ಪ್ರಮಾಣದಲ್ಲಿ ಹೊಡೆತ ಕೊಟ್ಟಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯ ಬನವಾಸಿ ರಸ್ತೆ ಬಳಿ ವಿದ್ಯುತ್ ಕಂಬ ಹಾಗೂ ಮರಗಳು ಉರುಳಿ ಸಾಕಷ್ಟು ಹಾನಿಯಾಗಿದೆ.

ಕದ್ರಾ ಜಲಾಶಯದಿಂದ ನೀರು ಬಿಡುಗಡೆ: ಮಳೆ ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ಹೆಚ್ಚು ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಜಾಗೃತಾ ಕ್ರಮವಾಗಿ ಕದ್ರಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರನ್ನು 6 ಗೇಟ್‍ಗಳ ಮೂಲಕ ಹೊರ ಬಿಡಲಾಗಿದೆ. ಕಾಳಿ ನದಿ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಕಳೆದ ಮೂರು ದಿನಗಳಿಂದ ಮಳೆ ಜೋರಾಗಿದ್ದು, ಕದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಗರಿಷ್ಠ 34.50 ಮೀಟರ್ ಸಾಮಥ್ರ್ಯ ಹೊಂದಿರುವ ಜಲಾಶಯದಲ್ಲಿ ಈಗಾಗಲೇ 32.00 ಮೀಟರ್ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ 6 ಗೇಟ್‍ಗಳನ್ನು ತೆರೆದು 40 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಈಗಾಗಲೇ ನದಿ ತೀರದ ಜನರಿಗೆ ಎಚ್ಚರಿಕೆ ನೀಡಿ ಸ್ಥಳಾಂತರಿಸಿರುವ ಕೆಪಿಸಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಮೈಕ್ ಮೂಲಕ ಸಂದೇಶ ರವಾನಿಸುತ್ತಿದ್ದಾರೆ. ಅಲ್ಲದೇ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿ, ನೋಡಲ್ ಅಧಿಕಾರಿ ಸೇರಿದಂತೆ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *