ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ‘ಗೋ’ರಕ್ಷಣೆ? – ಕುಮಾರಸ್ವಾಮಿ

Public TV
2 Min Read

ಬೆಂಗಳೂರು: ರಾಸುಗಳಿಗೆ ಕಾಲುಬಾಯಿ ಜ್ವರಕ್ಕೆ ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋ ರಕ್ಷಣೆ ಎಂದು ಟ್ವಿಟ್ಟರ್‍ ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?

`ಗೋ` ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ. ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೇ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ. ಇದನ್ನೂ ಓದಿ: ಕೋವಿಡ್‍ನಿಂದ ಮೃತರಾದ ಶಿಕ್ಷಕರಿಗೆ ಪರಿಹಾರ ಕೊಡಿ- ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಕಳೆದ ಅಕ್ಟೋಬರ್‍ ನಲ್ಲಿ ಕೇಂದ್ರ ಸರ್ಕಾರ ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೋವಿಡ್-19 ಕಾರಣದಿಂದ ಲಸಿಕೆ ಹಾಕಿಲ್ಲ ಎಂದು ಪಶುವೈದ್ಯರು ಹೇಳಿದ್ದಾರೆ. ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ. ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾ. ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಮುಂದೆ ಜೂನ್‍ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು. ಇದನ್ನೂ ಓದಿ: ಲಸಿಕೆ ಅಭಿಯಾನದಲ್ಲಿ ಕೇಂದ್ರ ಸರ್ಕಾರದಿಂದ ಕನ್ನಡಿಗರಿಗೆ ತಾರತಮ್ಯವಾಗುತ್ತಿದೆ-ಹೆಚ್.ಡಿ ಕುಮಾರಸ್ವಾಮಿ

ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಬೇಕು. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಲುಬಾಯಿ ಜ್ವರಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಇದರಿಂದ ಎಚ್ಚೆತ್ತ ಸರ್ಕಾರ ಕೂಡ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ ಎಂದು ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *