ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಮುರುಗೇಶ್ ನಿರಾಣಿ

Public TV
2 Min Read

ಬೆಂಗಳೂರು: ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ನಿಗದಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ರೂ. ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಬಣ್ಣಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿಕ್ಟೋರಿಯಾ ಆಸ್ಪತ್ರೆಯ ಸಿ ಬ್ಲಾಕ್ ಮುಂಭಾಗ ವಿದ್ಯುತ್ ಭಾಗ್ಯ

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್

ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ರೂ. ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.

ನವೆಂಬರ್‌ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *