ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

Public TV
2 Min Read

ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ.

ಇದೇ ವೇಳೆ ಗಲಭೆ ಪೀಡಿತ ಪ್ರದೇಶವಾದ ಹೌರಾ ಜಿಲ್ಲೆಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ನನ್ನು ಪೊಲೀಸರು ಬಂಧಿಸಿ, ಸುಮಾರು ನಾಲ್ಕು ಗಂಟೆಗಳ ಬಳಿಕ ಬಿಡುಗಡೆಗೊಳಿಸಿದ್ದಾರೆ. ಹೌರಾ ಜಿಲ್ಲೆಯಲ್ಲಿ ಹಿಂಸಾತ್ಮಕ ಪತ್ರಿಭಟನೆ ನಡೆಯುತ್ತಿದ್ದರಿಂದ ಮಜುಂದಾರ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

ಬಿಡುಗಡೆಯಾದ ಬಳಿಕ ಮಜುಂದಾರ್ ಇತರ ಬಿಜೆಪಿ ನಾಯಕರೊಂದಿಗೆ ಸೇರಿ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿದ್ದಾರೆ. ಹೌರಾ ಮತ್ತು ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಬಂಗಾಳ ರಾಜ್ಯದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕೋರಿದ್ದಾರೆ.

ಜೆ.ಪಿ.ನಡ್ಡಾ ಖಂಡನೆ: ಮಜುಂದಾರ್ ಬಂಧನವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಖಂಡಿಸಿದ್ದಾರೆ. ಬಂಗಾಳ ಸರ್ಕಾರವು ಅಪರಾಧಿಗಳ ಉತ್ಸಾಹವನ್ನು ಹೆಚ್ಚಿಸುತ್ತಿದೆ. ಸಮಾಜ ವಿರೋಧಿಗಳಿಗೆ ಆಶ್ರಯ ನೀಡುತ್ತಿದೆ. ಮತ್ತೊಂದೆಡೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಜನರ ಹಕ್ಕುಗಳ ವಿರುದ್ಧ ಹೋರಾಡುವವರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

ಹೌರಾ ಜಿಲ್ಲೆಯ ಪಾಂಚ್ಲಾದಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು, ಕಲ್ಲು ಹಾಗೂ ಇಟ್ಟಿಗೆಗಳನ್ನು ಎಸೆದಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಪಂಚ್ಲಾ ಮಾರುಕಟ್ಟೆಯ ಸಮೀಪದ ಕೆಲ ಅಂಗಡಿ ಹಾಗೂ ಮನೆಗಳನ್ನು ದರೋಡೆ ಮಾಡಲಾಗಿದೆ. ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೌರಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಲ ರಾಜಕೀಯ ಪಕ್ಷಗಳು ಗಲಭೆಗಳನ್ನು ಪ್ರಚೋದಿಸಲು ಯತ್ನಿಸುತ್ತಿವೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *