ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

Public TV
2 Min Read

ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಕ್ತರ ಆಕ್ರಂದನ ಮುಗಿಲು ಮುಟ್ಟಿದೆ. ರಾಜ್ಯದ ಪ್ರಮುಖ ಗಣ್ಯರೂ ಕಂಬನಿ ಮಿಡಿಯುವ ಮೂಲಕ ಶ್ರೀಗಳಿಗೆ ಕಣ್ಣೀರ ವಿದಾಯಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿಎಂ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೇಂದ್ರ ಸಚಿವ ಜಿ.ಪರಮೇಶ್ವರ್‌, ಶಾಸಕ ಬಸನಗೌಡ ಪಾಟೀಲ ಯತ್ನಾಳ್‌, ಸಚಿವ ವಿ.ಸೋಮಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯಾದ್ಯಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಸವರಾಜ ಬೊಮ್ಮಾಯಿ:
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಹೆಚ್‌.ಡಿ ಕುಮಾರಸ್ವಾಮಿ:
ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ. ಸಮಾಜಕ್ಕೆ ಚಿಕಿತ್ಸರಾಗಿದ್ದ ಪೂಜ್ಯರು, ತಮ್ಮ ಪರಿಪೂರ್ಣ ಸಾರ್ಥಕ ಬದುಕಿನಿಂದಲೇ ನಮ್ಮನ್ನು ಪಾವನಗೊಳಿಸಿದವರು. ತಮ್ಮ ಪ್ರತಿ ಹೆಜ್ಜೆಯಲ್ಲೂ ಜ್ಞಾನದ ಬೆಳಕು ಮೂಡಿಸುತ್ತಿದ್ದ ಅವರ ನಿರ್ಗಮನ ಬಹುದೊಡ್ಡ ನಷ್ಟ. ಪೂಜ್ಯರು ಬಿಟ್ಟುಹೋಗಿರುವ ಅರಿವು ನಮಗೆಲ್ಲ ದಿವ್ಯಬೆಳಕು. ಆ ಬೆಳಕಿನಡಿಯಲ್ಲಿ ಮುನ್ನಡೆಯೋಣ ಎನ್ನುವ ಆಶಯ ನನ್ನದಾಗಿದೆ.

ಡಿ.ಕೆ ಶಿವಕುಮಾರ್‌:
ಖ್ಯಾತ ಪ್ರವಚನಕಾರರು ಹಾಗೂ ಜ್ಞಾನಕೋಶವೆಂದೇ ಪ್ರಸಿದ್ಧರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ಕೇಳಿ ಅತೀವ ನೋವುಂಟಾಯಿತು. ಅವರ ಸಾವು ತುಂಬಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಅಪಾರ ಭಕ್ತರಿಗೆ ನನ್ನ ಸಂತಾಪಗಳು.

ಆರಗ ಜ್ಞಾನೇಂದ್ರ:
ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಬಹಳ ದುಃಖ ಉಂಟಾಗಿದೆ. ನಾಡಿನ ಸಾಮಾಜಿಕ ಹಾಗೂ ಅಧ್ಯಾತ್ಮ ವಲಯಕ್ಕೆ ಅವರ ಸೇವೆ ಸ್ಮರಣೀಯವಾದುದು. ಶ್ರೀಗಳ ಆತ್ಮಕ್ಕೆ ಸದ್ಗತಿ ದೊರೆಯಲಿ. ಅನುಯಾಯಿಗಳಿಗೆ ಈ ನೋವು ಭರಿಸುವ ಶಕ್ತಿ ದೊರೆಯಲಿ. ಶ್ರೀಗಳು ‘ನಡೆದಾಡುವ ದೇವರು’ ಎಂದೇ ಹೆಸರು ಪಡೆದಿದ್ದರು. ತಮ್ಮ ಅಪಾರ ಜ್ಞಾನಧಾರೆಯನ್ನು ಜನರಿಗೆ ಎರೆದು ಬದುಕಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಅವರ ಸೇವೆ ಅಜರಾಮರ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *