ಬಳ್ಳಾರಿ: ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾದ ಮಹಿಳಾ ಕೈದಿ

Public TV
1 Min Read

ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಹಿಳಾ ಕೈದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾಳೆ.

25 ವರ್ಷದ ಮಾಬುನ್ನಿ ಆತ್ಮಹತ್ಯೆಗೆ ಶರಣಾದ ಮಹಿಳಾ ಕೈದಿಯಾಗಿದ್ದು, ಜೈಲಿನ ಲೇಡಿಸ್ ಬ್ಯಾರಕ್ ನ ಏಳನೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಸ್ಥಳದಲ್ಲಿದ್ದ ಇತರೆ ಮಹಿಳಾ ಕೈದಿಗಳು ನೇಣಿನ ಕುಣಿಕೆಯಿಂದ ಕೆಳಗಿಳಿಸಿ, ಸಿಬ್ಬಂದಿ ಸಹಾಯದಿಂದ ವಿಮ್ಸ್ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದ್ರೆ ಮಾರ್ಗ ಮಧ್ಯೆ ಮಾಬುನ್ನಿ ಸಾವನ್ನಪ್ಪಿದ್ದಾಳೆ.

ಮಾಬುನ್ನಿಯನ್ನು ಡಿಸಿ ನಗರದಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ಹಾಗೂ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆದು ಬಳ್ಳಾರಿ ನ್ಯಾಯಾಲಯದಲ್ಲಿ ಹತ್ತು ವರ್ಷ ಶಿಕ್ಷೆ ವಿಧಿಸಲಾಗಿತ್ತು. ಆದರೆ ಮಾಬುನ್ನಿ ಜಿಲ್ಲಾ ನ್ಯಾಯಾಲಯದ ಅದೇಶವನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಳು.

ಆದ್ರೆ ಧಾರವಾಡ ಹೈಕೋರ್ಟ್‍ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಮಾಬುನ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂಧ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *