ನಾಳಿನ ಎಲ್ಲಾ ರೀತಿಯ ಪ್ರತಿಭಟನೆ ರದ್ದು – FKCCI

Public TV
2 Min Read

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಕರೆ ನೀಡಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ರದ್ದುಗೊಳಿಸಲಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ತಿಳಿಸಿದೆ.

ಇಂದು (ಜು.23) ಸಿಎಂ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ಸಂಸ್ಥೆ ಮತ್ತು ವ್ಯಾಪಾರ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಿದರು. ಯುಪಿಐ ವಹಿವಾಟುಗಳ ಆಧಾರದ ಮೇಲೆ ಇತ್ತೀಚೆಗೆ ಹೊರಡಿಸಲಾದ ಜಿಎಸ್‌ಟಿ ಸೂಚನೆಗಳ ಕುರಿತು ಸಣ್ಣ ವ್ಯಾಪಾರಿಗಳ ಆತಂಕವನ್ನು ಪರಿಹರಿಸುವಲ್ಲಿ ಸಿದ್ದರಾಮಯ್ಯ ಅವರು ತೆಗೆದುಕೊಂಡ ನಿರ್ಧಾರವನ್ನು ಎಫ್‌ಕೆಸಿಸಿಐ ಸ್ವಾಗತಿಸಿದೆ. ಈ ನಿಟ್ಟಿನಲ್ಲಿ ಎಫ್‌ಕೆಸಿಸಿಐ ಯಾವುದೇ ಬಂದ್‌ಗೆ ಬೆಂಬಲ ನೀಡಿರುವುದಿಲ್ಲ ಎಂದಿದೆ.

ಈ ವೇಳೆ ಎಫ್‌ಕೆಸಿಸಿಐ ಅಧ್ಯಕ್ಷರು ಮಾತನಾಡಿ, ಸಣ್ಣ ವ್ಯಾಪಾರಗಳಲ್ಲಿ ಹಲವರು ಹಾಲು, ತರಕಾರಿ ಮತ್ತು ಹೂವು ವ್ಯಾಪಾರಗಳಂತಹ ಅಗತ್ಯ ಮತ್ತು ವಿನಾಯಿತಿ ಪಡೆದ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ. ಜಿಎಸ್‌ಟಿ ನೋಟಿಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪಾವತಿಸಲು ಅವಕಾಶ ನೀಡಬೇಕು. ಹೀಗಾಗಿ ವ್ಯಾಪಾರಿಗಳು ನೇರವಾಗಿ ವಾಣಿಜ್ಯ ತೆರಿಗೆ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಜಿಎಸ್‌ಟಿ ಕುರಿತು ಸರಿಯಾಗಿ ಜಾಗೃತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಈ ಸಲುವಾಗಿ ಎಫ್‌ಕೆಸಿಸಿಐ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ನಂತರ ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕೆಂದು ಮನವಿ ಮಾಡಿಕೊಂಡರು.

ಬಳಿಕ ಸಿಎಂ ಮಾತನಾಡಿ, ಯುಪಿಐ ಅಡಿ 40 ಲಕ್ಷ ರೂ.ಗೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೋಟಿಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ನಂತರ ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಮನ್ನಾ ಮಾಡಲಾಗುವುದು, ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳಬೇಕೆಂದು ಸ್ಪಷ್ಟಪಡಿಸಿದರು.

ಸಿಎಂ ಮಾತಿಗೆ ಎಫ್‌ಕೆಸಿಸಿಐ ಅಧ್ಯಕ್ಷರು ಪ್ರತಿಕ್ರಿಯಿಸಿ, ಮುಖ್ಯಮಂತ್ರಿಯವರ ನಿರ್ಣಾಯಕ ಮತ್ತು ಪಾರದರ್ಶಕ ತೀರ್ಮಾನವನ್ನು ನಾವು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ. ವಿನಾಯಿತಿ ಪಡೆದ ಸರಕು ವ್ಯಾಪಾರಿಗಳಿಗೆ ತೆರಿಗೆ ವಿಧಿಸಲಾಗುವುದಿಲ್ಲ ಮತ್ತು ನೋಂದಣಿಯ ನಂತರ ಬಾಕಿಗಳನ್ನು ಮನ್ನಾ ಮಾಡಲಾಗುವುದು ಎಂಬ ಸರ್ಕಾರದ ಭರವಸೆಯು ವ್ಯಾಪಾರಿಗಳ ವಿಶ್ವಾಸವನ್ನು ಗಳಿಸಲಿದೆ. ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಉದ್ಯಮಿಗಳ ಮತ್ತು ಸಣ್ಣ ವ್ಯಾಪಾರಿಗಳ ಪರವಾಗಿದೆ ಎಂದರು.

ಈ ನಿಟ್ಟಿನಲ್ಲಿ ಎಫ್‌ಕೆಸಿಸಿಐ ಯಾವುದೇ ಬಂದ್‌ಗೆ ಬೆಂಬಲ ನೀಡಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿಯವರ ಭರವಸೆಯ ನಂತರ, ನಾಳಿನ ಎಲ್ಲಾ ವ್ಯಾಪಾರ ಸಂಸ್ಥೆಗಳು ಮತ್ತು ಬೀದಿ ವ್ಯಾಪಾರಿ ಸಂಘಗಳು ಉದ್ದೇಶಿತ ಪ್ರತಿಭಟನೆಗಳನ್ನು ಹಿಂತೆಗೆದುಕೊಂಡಿದ್ದೇವೆ. ಅನುಸರಣೆ ಹಂಚಿಕೆಯ ಜವಾಬ್ದಾರಿಯಾಗಿದ್ದರೂ, ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಸಹಾನುಭೂತಿ ಮಾರ್ಗದರ್ಶಿ ತತ್ವಗಳಾಗಿ ಉಳಿಯಬೇಕು ಎಂದು ಎಫ್‌ಕೆಸಿಸಿಐ ಪುನರುಚ್ಚರಿಸುತ್ತದೆ ಎಂದು ಹೇಳಿದರು.

Share This Article