ಐಫೋನ್‌ ತಯಾರಿಸುವ ಫಾಕ್ಸ್‌ಕಾನ್ ಸೇರಿ 18 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ

Public TV
3 Min Read

– ಒಟ್ಟು 75,393 ಕೋಟಿ ರೂ. ಹೂಡಿಕೆಗೆ ಸಮ್ಮತಿ
– 77,606 ಜನರಿಗೆ ಉದ್ಯೋಗಾವಕಾಶ ನಿರೀಕ್ಷೆ

ಬೆಂಗಳೂರು: ಕೈಗಾರಿಕೆಗಳಿಗೆ ಸಂಬಂಧಿಸಿದಂತೆ 61ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯು ಫಾಕ್ಸ್‌ಕಾನ್ (Foxconn) ಸೇರಿದಂತೆ 75,393.57 ಕೋಟಿ ರೂ. ಮೊತ್ತದ 18 ಯೋಜನೆಗಳಿಗೆ ಅನುಮೋದನೆ ನೀಡಿದೆ.

ಫಾಕ್ಸ್‌ಕಾನ್ ಹಾನ್ ಹೈ ಟೆಕ್ನಾಲಜಿ ಇಂಡಿಯಾ ಮೆಗಾ ಡೆವಲಪ್‌ಮೆಂಟ್ ಪ್ರೈ.ಲಿ. (ಎಫ್‌ಹೆಚ್‌ಎಚ್) 50 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ 8,000 ಕೋಟಿ ರೂ. ವೆಚ್ಚದ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ನೀಡಲಾಗಿದೆ. 15 ದಿನಗಳ ಹಿಂದೆ ಫಾಕ್ಸ್‌ಕಾನ್ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ನಿಯೋಗ ರಾಜ್ಯಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೊಂದಿಗೆ ಸಮಾಲೋಚನೆ ನಡೆಸಿತ್ತು. ಇದನ್ನೂ ಓದಿ: ಬಿಜೆಪಿಗೆ ಚಿಂಚನಸೂರ್‌ ರಾಜೀನಾಮೆ ನೀಡಿದ್ಯಾಕೆ?

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಫಾಕ್ಸ್‌ಕಾನ್ ಸೇರಿದಂತೆ 10 ಹೊಸ ಯೋಜನೆಗಳು, 5 ವಿಸ್ತರಣೆ ಯೋಜನೆಗಳು ಮತ್ತು 3 ಹೆಚ್ಚುವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ 18 ಯೋಜನೆಗಳಿಂದ 77,606 ಜನರಿಗೆ ಉದ್ಯೋಗಾವಕಾಶ ನಿರೀಕ್ಷಿಸಲಾಗಿದೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಗ್ರೀನ್ ಹೈಡ್ರೋಜನ್, ಎಥೆನಾಲ್ ಉತ್ಪಾದನೆ, ಪವನ ವಿದ್ಯುತ್ ಸ್ಥಾವರ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಜೋಡಣೆ, ಲೀಥಿಯಂ ಬ್ಯಾಟರಿ ಮತ್ತು ಎಲೆಕ್ಟ್ರಿಕ್ ವಾಹನಗಳು, ಸಿಮೆಂಟ್ ಮತ್ತು ಸ್ಟೀಲ್ ಕಂಪನಿಗಳ ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ” ಎಂದರು. ಇದನ್ನೂ ಓದಿ: 2 ವರ್ಷ ಬ್ಯಾನ್ ಬಳಿಕ ಫೇಸ್‌ಬುಕ್, ಯೂಟ್ಯೂಬ್‌ಗೆ ಮರಳಿದ ಟ್ರಂಪ್

ರಾಜ್ಯಕ್ಕೆ ಇಷ್ಟು ದೊಡ್ಡ ಮೊತ್ತದ ಬಂಡವಾಳ ಹರಿದು ಬಂದಿರುವುದು ಸಂತಸ ತಂದಿದೆ. ಈ ಯೋಜನೆಗಳು ರಾಜ್ಯದ ಕೈಗಾರಿಕಾ ಪ್ರಗತಿಗೆ ಮತ್ತಷ್ಟು ವೇಗ ನೀಡಲಿದೆ. ರಾಷ್ಟ್ರದ ಉತ್ಪಾದನಾ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ ಗಮನಾರ್ಹವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, “ಹೂಡಿಕೆ ಪ್ರಸ್ತಾವನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಉದ್ಯಮ ಸ್ನೇಹಿ ನೀತಿಗಳು ಮತ್ತು ಉದ್ಯಮಗಳಿಗೆ ಪೂರಕ ಪರಿಸರ ವ್ಯವಸ್ಥೆಗೆ ಈ ಹೂಡಿಕೆಗಳು ಸಾಕ್ಷಿಯಾಗಿವೆ. ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ” ಎಂದು ತಿಳಿಸಿದರು. ಇದನ್ನೂ ಓದಿ: ಯುರೋಪ್‌ನಲ್ಲಿ ಗೂಗಲ್ ಉದ್ಯೋಗಿಗಳ ಸಾಮೂಹಿಕ ವಜಾ- ಕಚೇರಿಯಲ್ಲಿ ಪ್ರತಿಭಟನೆ

ನವೀಕರಿಸಬಹುದಾದ ಇಂಧನ, ಎಥೆನಾಲ್, ಗ್ರೀನ್ ಹೈಡ್ರೋಜನ್ ಉತ್ಪಾದನೆ, ಏರೋಸ್ಪೇಸ್ ಮತ್ತು ಎಲೆಕ್ಟ್ರಾನಿಕ್ ಸಿಸ್ಟಮ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ) ಕ್ಷೇತ್ರವನ್ನು ಉತ್ತೇಜಿಸಲು ಆಂಪ್ಲಸ್ ಆ್ಯಕ್ಟಿವ್ ಪ್ರೈ.ಲಿ., ಆಯನ ರಿನೀವೆಬಲ್ ಪವರ್ ಸಿಕ್ಸ್ ಪ್ರೈ.ಲಿ., ವಿಶ್ವರಾಜ್ ಶುಗರ್ ಇಂಡಸ್ಟ್ರೀಸ್‌ ಲಿ., ಟಾಟಾ ಅಡ್ವಾನ್ಸ್‌ಡ್‌ ಸಿಸ್ಟಮ್ ಲಿ. ಮುಂತಾದ ಕಂಪನಿಗಳ ಪ್ರಸ್ತಾವನೆಗಳನ್ನು ಅನಿಮೋದಿಸಲಾಗಿದೆ ಎಂದು ಹೇಳಿದರು.

ಕಬ್ಬು ಬೆಳೆಯುವುದರಲ್ಲಿ ದೇಶದಲ್ಲಿ 3ನೇ ಅತಿ ದೊಡ್ಡ ರಾಜ್ಯವಾಗಿರುವ ಕರ್ನಾಟಕದಲ್ಲಿ ಎಥೆನಾಲ್ ಅತಿ ಹೆಚ್ಚು ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿದೆ ಎಂದು ಹೇಳಿದ ಅವರು, ಸಭೆಯಲ್ಲಿ ಹಸಿರು ಇಂಧನಕ್ಕೆ ಸಂಬಂಧಿಸಿದ ಹೂಡಿಕೆಗಳನ್ನು ಅನುಮೋದಿಸಿರುವುದು ಖುಷಿ ತಂದಿದೆ ಎಂದರು. ಇದನ್ನೂ ಓದಿ: ಉದ್ಯೋಗಿಗಳಿಗೆ ಈಗ ಬೋನಸ್ ಇಲ್ಲ, ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆ್ಯಪಲ್

ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ, ಐಟಿ ಬಿಟಿ ಸಚಿವ ಡಾ. ಅಶ್ವಥ್‌ ನಾರಾಯಣ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಆರ್.ಗಿರೀಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರಯ್ಯ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *