ಸಿಬಿಐ ಬಂಧನ- ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ

Public TV
1 Min Read

ನವದೆಹಲಿ: ಹೊಸ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ‌. ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠ ಹೇಳಿದೆ.

ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು. ವಿಚಾರಣೆ ಬಳಿಕ ಸಿಬಿಐ ಕೂಡಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಹತ್ವದ ಬೆಳವಣಿಗೆಯಲ್ಲಿ ಕೇಜ್ರಿವಾಲ್ (Aravind Kejriwal) ನೇರವಾಗಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 439 ರ ಅಡಿಯಲ್ಲಿ ಜಾಮೀನಿಗಾಗಿ ನೇರವಾಗಿ ಹೈಕೋರ್ಟ್‌ಗೆ ಹೋಗಲು ಯಾವುದೇ ಅಡ್ಡಿ ಇಲ್ಲ ಎಂದು ವಕೀಲರು ಹೇಳಿದ್ದಾರೆ.

ಸಿಬಿಐ ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿಯ ಮನವಿ ಮತ್ತು ಅವರನ್ನು ಏಜೆನ್ಸಿಯ ಕಸ್ಟಡಿಗೆ ಒಪ್ಪಿಸುವ ವಿಚಾರಣಾ ನ್ಯಾಯಾಲಯದ ಆದೇಶವೂ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಜುಲೈ 12 ರಂದು ನಡೆಯುವ ವಿಚಾರಣೆ ಅರವಿಂದ್ ಕೇಜ್ರಿವಾಲ್ ಅವರಿಗೆ ಮಹತ್ವದಾಗಿದೆ.

Share This Article