ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು: ಸಿಎಂ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ಇರಲಿದೆ. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್‌ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವ

ಕೋವಿಡ್ ಪರೀಕ್ಷೆ ಹೆಚ್ಚಳ: ಕೋವಿಡ್ ಹೊಸ ತಳಿ ಓಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್‌ಸಿಬಿಎಸ್‌ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದರು.

ಕ್ಲಸ್ಟರ್‌ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ ನಡೆಸಿ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್‌ ಕಸ್ಟರ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಮುಂಬೈ, ಪುಣೆ, ನಾಸಿಕ್ ಶಾಲೆ ಪುನರಾರಂಭ ಮುಂದೂಡಿಕೆ

ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ಪರಿಶೀಲನಾ ಸಭೆ ನಡೆಸುತ್ತಿದ್ದು, ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *