ನಾನು ಅಧಿಕಾರಿಗಳಿಗೆ ಕೊಟ್ಟ ವಿಶ್ವಾಸದಿಂದ ಬಿಜೆಪಿ ಮಾನ ಉಳಿದಿದೆ: ಎಚ್‍ಡಿಕೆ

Public TV
1 Min Read

– ಬಿಎಸ್‍ವೈ ವಿಪಕ್ಷದ ಸಭೆ ಕರೆದರೆ ಒಟ್ಟಾಗಿ ಕೆಲಸ ಮಾಡಬಹುದು

ಬೆಳಗಾವಿ: ಮೈತ್ರಿ ಸರ್ಕಾರದ ಅವಧಿಯಲ್ಲಿ ನಾನು ಅಧಿಕಾರಿಗಳಿಗೆ ಕೊಟ್ಟ ವಿಶ್ವಾಸದಿಂದ ಬಿಜೆಪಿ ಮಾನ ಉಳಿದಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ರಚನೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇದ್ದರೆ ಅಧಿಕಾರ ನಡೆಸುವುದು ಕಷ್ಟವಾಗುತ್ತದೆ ಎಂದು ಹೇಳಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಹೀಗಾಗಿ ಎಲ್ಲರೂ ಸೇರಿ ಕೆಲಸ ಮಾಡಬೇಕಿದೆ. ಜನಕ್ಕೆ ಒಳ್ಳೆಯದಾಗುತ್ತದೆ ಎನ್ನುವುದಾದರೆ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇನೆ. ಬಿ.ಎಸ್.ಯಡಿಯೂರಪ್ಪ ಅವರು ಬೇಕಾದರೆ ವಿರೋಧ ಪಕ್ಷದ ಸಭೆ ಕರೆಯಲಿ, ಎಲ್ಲರೂ ಒಟ್ಟಾಗಿ ಮಾಡಬಹುದು ಎಂದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸುಮ್ಮನೆ ಹೋದರು. ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಮಾತನಾಡಲಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರದಲ್ಲಿದೆ. ಕೇಂದ್ರದ ಆರ್ಥಿಕ ಪರಿಸ್ಥಿತಿಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಿ ಪರಿಹಾರ ಬಿಡುಗಡೆ ಮಾಡಿಸಬೇಕು ಎಂದು ಹೇಳಿದರು.

ನೆರೆ ಸಂತ್ರಸ್ತರಿಗೆ ತಕ್ಷಣವೇ ಆರ್ಥಿಕ ಸಹಾಯ, ಮನೆ ಕಲ್ಪಿಸಬೇಕು. ಪರಿಹಾರ ಕೇಂದ್ರದ ಸಂತ್ರಸ್ತರಿಗೆ ಕನಿಷ್ಠ ಸೌಕರ್ಯ ಒದಗಿಸಬೇಕು. ರಾಜ್ಯದಲ್ಲಿ ಅಂದಾಜು ಐವತ್ತರಿಂದ ಅರವತ್ತು ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹಾನಿಯಾಗಿದೆ. ತಕ್ಷಣಕ್ಕೆ ಕೇಂದ್ರ ಸರ್ಕಾರವು ನಾಲ್ಕರಿಂದ ಐದು ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Share This Article
Leave a Comment

Leave a Reply

Your email address will not be published. Required fields are marked *