ಕನ್ನಡದಲ್ಲಿ ಪರೀಕ್ಷೆ ನಡೆಸದ್ದಕ್ಕೆ ಕೇಂದ್ರದ ವಿರುದ್ಧ ಗುಡುಗಿದ ಹೆಚ್‍ಡಿಕೆ

Public TV
2 Min Read

ಬೆಂಗಳೂರು: ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕನ್ನಡದ ಮೇಲೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸುತ್ತೇನೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದು ತಮ್ಮ ಟ್ವಿಟ್ಟರ್‍ ನಲ್ಲಿ ಬರೆದುಕೊಂಡಿದ್ದಾರೆ.

ಈ ವಿಚಾರಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಕೆಲ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬ್ಯಾಂಕಿಂಗ್ ಪರೀಕ್ಷೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವುದಾಗಿ ಹೇಳಿ ಮಾತಿಗೆ ತಪ್ಪಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು, ಕೇಂದ್ರಸಚಿವೆ ನಿರ್ಮಲಾ ಸಿತಾರಾಮನ್ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತ ಪಡಿಸಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಹಿಂದೆ ಜುಲೈ 7 ರಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಲ್ಲಿ 45 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿದ್ದು, 90 ಸಾವಿರ ಜನರು ಉದ್ಯೋಗಿಗಳಿದ್ದಾರೆ. ಇವುಗಳಿಗೆ ಆರ್.ಆರ್.ಬಿ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಐಬಿಪಿಎಸ್ ಮೂಲಕ ನೇಮಕಾತಿ ನಡೆಯುತ್ತಿದೆ. ಹೀಗಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಬ್ಯಾಂಕ್‍ನಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡುವ ನಿಟ್ಟಿನಲ್ಲಿ ಕನ್ನಡ ಸೇರಿದಂತೆ 13 ಸ್ಥಳಿಯ ಭಾಷೆಯಲ್ಲೂ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದ್ದರು.

ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಥಳೀಯ ಭಾಷೆಯಲ್ಲಿ ಹೆಚ್ಚು ಜ್ಞಾನ ಪಡೆದುಕೊಂಡಿರುತ್ತಾರೆ. ಹೀಗಾಗಿ ಪ್ರಾದೇಶಿಕ ಭಾಷೆಯಲ್ಲಿಯೇ ಆರ್.ಆರ್.ಬಿ, ಐಬಿಪಿಎಸ್ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು.

ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಕ್ಲರ್ಕ್ ಹುದ್ದೆಗಳನ್ನು ನೇಮಕಾತಿ ಮಾಡಲು ಇಂದು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಅರ್ಜಿಯನ್ನು ಅಹ್ವಾನ ಮಾಡಿದ್ದು, ಇದರಲ್ಲಿ ಕೇವಲ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದೆ. ಆದರೆ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆಗಳು ತಿಳಿದಿರಬೇಕು ಎಂದು ಹೇಳಲಾಗಿದೆ. ಆದರೆ ಅದನ್ನು ಖಚಿತ ಪಡಿಸಲು ಯಾವುದೇ ಮಾನದಂಡವನ್ನು ಹೇಳದೇ ಇರುವುದು ಕನ್ನಡಿಗರ ಟೀಕೆಗೆ ಗುರಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *