ಪೂರ್ಣಾವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವಿರೋಧ ಆಯ್ಕೆ

Public TV
1 Min Read

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮವಾಗಿದೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣೆ ವೇಳೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ನಾಮಪತ್ರ ಸಲ್ಲಿಸಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ಅವಿರೋಧವಾಗಿ ಆಯ್ಕೆಯಾದರು.

ರಾಷ್ಟ್ರೀಯ ಸಾಂಸ್ಥಿಕ ಸಹ ಚುನಾವಣಾಧಿಕಾರಿ ಸಿ.ಟಿ ರವಿ ಅವಿರೋಧ ಆಯ್ಕೆ ಘೋಷಣೆ ಮಾಡಿದರು. ನಳಿನ್ ಕುಮಾರ್ ಕಟೀಲ್‍ಗೆ ಪ್ರಮಾಣ ಪತ್ರ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ವೇಳೆ ಬಿಜೆಪಿ ರಾಜ್ಯ ಸಾಂಸ್ಥಿಕ ಚುನಾವಣಾಧಿಕಾರಿ ಅಶ್ವಥ್ ನಾರಾಯಣ್ ಗೌಡ, ಸಹ ಚುನಾವಣಾಧಿಕಾರಿ ಹಾಲಪ್ಪ ಆಚಾರ್ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು. ಅಂದಹಾಗೆ 2020ರ ಜನವರಿ 16ರಿಂದ 2023ರ ಜನವರಿ 16ರ ತನಕ ನಳಿನ್ ಕುಮಾರ್ ಕಟೀಲ್ ಅಧಿಕಾರಾವಧಿ ಇರುತ್ತದೆ. ಪಕ್ಷದ ಸಂವಿಧಾನದ ಪ್ರಕಾರ ಚುನಾವಣೆ ಪ್ರಕ್ರಿಯೆ ನಡೆದಿದ್ದು, 2023ರ ವಿಧಾನಸಭಾ ಚುನಾವಣೆ ತನಕವೂ ಕಟೀಲ್ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಹೆಚ್ಚು.

ಪೂರ್ಣಾವಧಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿದರು. ಬಿಎಸ್‍ವೈ ನಂತರ ನನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದರು. ಸಾಂಸ್ಥಿಕ ಚುನಾವಣೆ ಪ್ರಕ್ರಿಯೆಗಳನ್ನು ಕಳೆದ 6 ತಿಂಗಳಲ್ಲಿ ಪೂರ್ಣಗೊಳಿಸಿದ್ದೇವೆ. 264 ಮಂಡಲ ಅಧ್ಯಕ್ಷರನ್ನ ಆಯ್ಕೆ ಪ್ರಕ್ರಿಯೆ ಮುಗಿದಿದೆ. 37 ಸಾಂಸ್ಥಿಕ ಸಂಘಟನಾ ಜಿಲ್ಲೆಗಳಲ್ಲಿ 20 ಸಾಂಸ್ಥಿಕ ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಆಗಿದೆ. ಚಾಚೂ ತಪ್ಪದೇ ಎಲ್ಲರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಆರಂಭದಲ್ಲಿ ಕರಾವಳಿ ಅವರು ಹೇಗೆ ನಿಭಾಯಿಸ್ತಾರೆ ಅಂತಿದ್ದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿದ್ದೇನೆ. ಮುಂದೆ ಗ್ರಾಮ ಪಂಚಾಯತ್ ಚುನಾವಣೆ ಇದೆ. ಶೇ.80ರಷ್ಟು ಸೀಟು ಗೆಲ್ಲುವ ಗುರಿ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಗುಜರಾತ್ ಮಾದರಿಯಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಘೋಷಿಸಿದರು.

Share This Article
Leave a Comment

Leave a Reply

Your email address will not be published. Required fields are marked *