ಮೂರ್ನಾಲ್ಕು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ: ವಿಜಯೇಂದ್ರ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಈಗ ಎಲ್ಲಾ ಕ್ಷೇತ್ರಗಳಲ್ಲಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರ್ಕಾರ ಬೇಕೆಂಬ ತೀರ್ಮಾನಕ್ಕೆ ಜನರು ಬಂದಿದ್ದಾರೆ ಎಂದರು. ಇದನ್ನೂ ಓದಿ: ಹಾಲಿ ಸಂಸದರಿಗೆ ಟಿಕೆಟ್ ಇಲ್ಲವೆಂದು ಮೋದಿ, ಅಮಿತ್ ಶಾ ಹೇಳಿಲ್ಲ: ಶೋಭಾ ಕರಂದ್ಲಾಜೆ

28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಇವತ್ತು, ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ. 22, 23, 24 ಕ್ಷೇತ್ರ ಗೆಲುವಿನ ಪ್ರಶ್ನೆ ಅಲ್ಲ. ಹೊಸ ಇತಿಹಾಸವನ್ನು ಬಿಜೆಪಿ ರಾಜ್ಯದಲ್ಲಿ ಸೃಷ್ಟಿಸಲಿದೆ ಎಂದು ರಾಜ್ಯಾಧ್ಯಕ್ಷನಾಗಿ ವಿಶ್ವಾಸ ಹೊಂದಿದ್ದೇನೆ. ಹಿಂದೆ ಬಾರದಂಥ ಅತ್ಯುತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿಗಳ ವಿಚಾರ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲಾ ವಿವರ ಲಭಿಸಲಿದೆ. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಎಲ್ಲರ ಪ್ರಶ್ನೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಉತ್ತರ ಲಭಿಸಲಿದೆ ಎಂದಿದ್ದಾರೆ.

ಡಿ.ಕೆ ಶಿವಕುಮಾರ್ (D.K Shivakumar) ನಡವಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ ಅವರು, ಬೆಂಗಳೂರಿನಲ್ಲಿ 15- 20 ದಿನಗಳಿಂದ ನೀರಿನ ತೀವ್ರ ಸಮಸ್ಯೆ ಇದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ 14ಕ್ಕೂ ಹೆಚ್ಚು ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅದರ ಅರ್ಥ ಏನು? ಬೆಂಗಳೂರಿನಲ್ಲಿ ಮನುಷ್ಯರೇ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ, 10 ವರ್ಷಗಳ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತಿವಿ: ಶೋಭಾ ಕರಂದಾಜ್ಲೆ

Share This Article