ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ: ಹೆಚ್‍ಡಿಕೆ

Public TV
2 Min Read

-#SaveRamanagara ಎಂದು ಹೆಚ್‍ಡಿಕೆ ಟ್ವೀಟ್
-ರಾಮನ ಹೆಸರಿಗೆ ಆಗುವ ಅಪಮಾನ

ಬೆಂಗಳೂರು: ಬಿಜೆಪಿ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಚಿಂತನೆ ನಡೆಸಿದೆ. ಈಗಾಗಲೇ ಈ ಸಂಬಂಧ ಪರ-ವಿರೋಧ ಚರ್ಚೆಗಳು ಆರಂಭಗೊಂಡಿವೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಗಳ ಮೂಲಕ ಬಿಜೆಪಿಯ ನಡೆಯನ್ನು ಖಂಡಿಸಿ, ಯಡಿಯೂರಪ್ಪನವರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್:
ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ.

ಬಿಎಸ್ ಯಡಿಯೂರಪ್ಪನವರೇ, ರಾಮನಗರದ ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದ್ದರೆ, ಜಿಲ್ಲೆಗೆ ನಾನು ನನ್ನ ಬಜೆಟ್ ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ ಹಾಗೂ ನನ್ನ ಜನರ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನೂ ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪ. ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ.

ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ?

ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರ ಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್ ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ. ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ.

ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೇ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ. ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ. ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.

Share This Article
Leave a Comment

Leave a Reply

Your email address will not be published. Required fields are marked *