ಮದ್ಯ ನಿಷೇಧಿಸಿದ ರಾಜ್ಯದಲ್ಲೇ ಕುಡಿದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ ಅಂದರ್

Public TV
1 Min Read

ಪಟ್ನಾ: ಬಿಹಾರ ರಾಜ್ಯದಲ್ಲಿ ಮದ್ಯ ಮಾರಾಟವನ್ನು ಬ್ಯಾನ್ ಮಾಡಲಾಗಿದೆ. ಆದ್ರೆ ಇಲ್ಲಿನ ಪುರ್ನಿಯಾ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ಕಂಠ ಪೂರ್ತಿ ಕುಡಿದು ಬಂದು ನಾಮಪತ್ರ ಸಲ್ಲಿಸಿ, ಪೊಲೀಸರ ಅತಿಥಿಯಾಗಿದ್ದಾರೆ.

ಹೌದು, ಪುರ್ನಿಯಾ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ರಾಜೀವ್ ಕುಮಾರ್ ಸಿಂಗ್ ಮಂಗಳವಾರ ನಾಮಪತ್ರ ಸಲ್ಲಿಕೆ ವೇಳೆ ಮದ್ಯಪಾನ ಮಾಡಿಕೊಂಡು ಬಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜೀವ್ ಮೂಲತಃ ಭಗಲ್‍ಪುರ ಜಿಲ್ಲೆಯವರು. ಮಂಗಳವಾರ ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಅಭ್ಯರ್ಥಿಯ ವರ್ತನೆ ಕಂಡು ಅನುಮಾನ ಬಂದಿದೆ. ಆಗ ಆಲ್ಕೋ ಮೀಟರ್ ನಿಂದ ಅಭ್ಯರ್ಥಿಯನ್ನು ಪರೀಕ್ಷಿಸಿದಾಗ ಆತ ಕುಡಿದಿರುವುದು ಖಚಿತವಾಗಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಖಚಿತವಾದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ರಾಜೀವ್ ಕುಮಾರ್‍ನನ್ನು ಬಂಧಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿರುವ ಕಾನೂನನ್ನು ಉಲ್ಲಂಘಿಸಿದಕ್ಕೆ ಆರೋಪಿ ಮೇಲೆ ಪ್ರಕರಣ ಕೂಡ ದಾಖಲಿಸಲಾಗಿದೆ. 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರ ಆಡಳಿತದಲ್ಲಿದಾಗ, ಬಿಹಾರದಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿತ್ತು. ಆದರೂ ಕೂಡ ಬಿಹಾರದಲ್ಲಿ ಮದ್ಯ ಮಾರಾಟ ನಿಂತಿಲ್ಲ ಅನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದ್ದು, ಈ ಕುರಿತು ರಾಜಕೀಯ ಪಾಳಯದಲ್ಲಿ ವ್ಯಾಪಕ ಚರ್ಚೆ ಶುರುವಾಗಿದೆ.

ಬಿಹಾರದ ಪುರ್ನಿಯಾ ಕ್ಷೇತ್ರದಿಂದ ಒಟ್ಟು 18 ಅಭ್ಯರ್ಥಿಗಳು ಲೋಕಸಮರಕ್ಕೆ ಕಣಕ್ಕಿಳಿಯಲಿದ್ದಾರೆ. ಅವರಲ್ಲಿ ಈಗಾಗಲೇ 11 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *