ಬ್ಯಾಂಕ್ ಉದ್ಯೋಗದಲ್ಲಿ ಕನ್ನಡಿಗರ ಮೀಸಲಾತಿಗೆ ಆಗ್ರಹ-ಕೈ ಕುಯ್ದುಕೊಂಡು ಪರೀಕ್ಷಾರ್ಥಿಗಳ ಅಕ್ರೋಶ

Public TV
1 Min Read

– ಪರೀಕ್ಷೆ ಬರೆಯದೇ ರಾಜ್ಯದ ವಿವಿಧೆಡೆ ಅಭ್ಯರ್ಥಿಗಳ ಪ್ರತಿಭಟನೆ

ಬೆಂಗಳೂರು: ಕನ್ನಡ ಭಾಷಾ ಮಾಧ್ಯಮದಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ರಾಜ್ಯದ ವಿವಿಧೆಡೆ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು, ಬಳ್ಳಾರಿ, ಕಲಬುರಗಿ, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ ಮತ್ತು ಶಿವಮೊಗ್ಗ ಸೇರಿದಂತೆ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವಕಾಶ ನೀಡ್ತಿರೋದನ್ನ ಖಂಡಿಸಿ ಹುಬ್ಬಳ್ಳಿಯಲ್ಲಿ ಸಲೀಂ ಎಂಬ ವಿದ್ಯಾರ್ಥಿ ತನ್ನ ಕೈಯನ್ನು ಕುಯ್ದುಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್ ನಾಗರಾಜ್ ಭೇಟಿ ನೀಡಿದ್ದು, ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಧಾರವಾಡದಲ್ಲಿಯೂ ರೂರಲ್ ಬ್ಯಾಂಕ್ ಪರೀಕ್ಷೆಯಿಂದ ಹೊರಗುಳಿದು ಪ್ರತಿಭಟಿಸಿದ ಅಭ್ಯರ್ಥಿಗಳು, ಆಂಧ್ರ ಮೂಲದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ಕೇಂದ್ರದ ಹೊರಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ನಮಗೆ ಕನ್ನಡ ಬಂದರೂ ಗ್ರಾಮೀಣ ಬ್ಯಾಂಕ್ ಗಳಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಕ್ಕಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯಲ್ಲಿ ಲಾಭಿ ಮಾಡಲಾಗುತ್ತಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.

ಕಲಬುರಗಿಯಲ್ಲಿ ಪರೀಕ್ಷೆಗೆ ನೆರೆಯ ರಾಜ್ಯ ಆಂಧ್ರಪ್ರದೇಶದಿಂದಲೂ ಅಭ್ಯರ್ಥಿಗಳು ಬಂದಿದ್ದು ಅವರನ್ನ ಪರೀಕ್ಷೆ ಬರೆಯಲು ಬಿಡುವುದಿಲ್ಲ ಎಂದು ಸ್ಥಳೀಯ ಪರೀಕ್ಷಾ ಅಭ್ಯರ್ಥಿಗಳು ಪಟ್ಟು ಹಿಡಿದಿದ್ದಾರೆ. ಶಹಬಾದ್ ರಸ್ತೆಯಲ್ಲಿರುವ ಶೆಟ್ಟಿ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಆದ್ರೆ ನೂರಾರು ಅಭ್ಯರ್ಥಿಗಳು ಕಾಲೇಜು ಆವರಣದಲ್ಲಿ ಕುಳಿತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.

https://www.youtube.com/watch?v=33Oq19s8_gA

 

Share This Article
Leave a Comment

Leave a Reply

Your email address will not be published. Required fields are marked *