ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

Public TV
2 Min Read

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಸಮೀಪಿಸಿದ್ದು, ಪ್ರಮುಖ ರಾಜಕೀಯ ಪಕ್ಷಗಳು ಗುದ್ದಾಟಕ್ಕೆ ಇಳಿದಿವೆ. ಈ ಕ್ಷೇತ್ರಗಳಲ್ಲಿ ಪ್ರಬಲ ಸಮುದಾಯಗಳ ಮತದಾರರನ್ನು ಓಲೈಸುವ ಪ್ರಯತ್ನವನ್ನೂ ಪಕ್ಷಗಳು ಮಾಡುತ್ತಿವೆ. ಇದೇ ಸಂದರ್ಭದಲ್ಲಿ ಜಾತಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮತದಾರರನ್ನು ಓಲೈಸಲು ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಹಾಗೂ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಿದ್ದೀರಿ ಸಿದ್ದರಾಮಯ್ಯ ಎಂದು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸೋದೇ ಸಿದ್ದು & ಟೀಂನ ಉದ್ದೇಶ: ಹೆಚ್‍ಡಿಕೆ ಕಿಡಿ

ಟ್ವೀಟ್‍ನಲ್ಲೇನಿದೆ..?
ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.

ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪ ಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವೇನಿತ್ತು? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ ಎಂದು ಟೀಕಾಪ್ರಹಾರ ನಡೆಸಿದೆ.

ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ಅವಹೇಳನ ಮಾಡಿದರು. ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು. ಅದಕ್ಕಾಗಿ ಟಿಪ್ಪು ಜಯಂತಿ ನಡೆಸಿದರು. ಸಿದ್ದರಾಮಯ್ಯನವರೇ ಇದು ಸಮಾಜ ವಿಭಜನೆಯಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನು ತಾಲಿಬಾನಿಗೆ ಕಳಿಸಬೇಕು: ಶ್ರೀನಿವಾಸ್ ಪ್ರಸಾದ್

ಜಾತಿ, ಕೋಮು ರಾಜಕೀಯವನ್ನು ಮಾಧ್ಯಮ ರಂಗದಲ್ಲಿಯೂ ತುರುಕಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದಾಗಿದೆ. ಅಲ್ಪಸಂಖ್ಯಾತ ಸಮುದಾಯದ ಪತ್ರಕರ್ತರಿಗೆ ಮಾತ್ರ ಮಾಧ್ಯಮ ಕಿಟ್ ಒದಗಿಸಲು ಆದೇಶ, ಅಲ್ಪಸಂಖ್ಯಾತರ ಒಡೆತನದ ಪತ್ರಿಕೆಗಳಿಗೆ ಜಾಹಿರಾತು ನೀಡಬೇಕು ಎಂದು ಸುತ್ತೋಲೆ.. ಇವೆಲ್ಲ ನಿಮ್ಮ ಸಾಧನೆಯಲ್ವೇ ಸಿದ್ದರಾಮಯ್ಯ ಎಂದು ಬಿಜೆಪಿ ಕುಟುಕಿದೆ. ಇದನ್ನೂ ಓದಿ: ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ

Share This Article
Leave a Comment

Leave a Reply

Your email address will not be published. Required fields are marked *