ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರ ಜೊತೆ ಸಿಎಂ ಮಾತುಕತೆ

Public TV
1 Min Read

– ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಿಎಂ ಮನವಿ

ನವದೆಹಲಿ: ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಕಲಬುರ್ಗಿಯಲ್ಲಿ ರೈಲ್ವೆ ಡಿವಿಶನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿ.ಪಿ.ಆರ್ ಮಾಡಲಾಗಿದ್ದರೂ ಅದನ್ನೂ ಪ್ರಶ್ನಿಸಲಾಗಿದೆ. ಆದಷ್ಟು ಬೇಗ ತಡೆಯಾಜ್ಞೆಯನ್ನು ತೆರವುಗೊಳಿಸಲು ಪ್ರಯತ್ನಿಸಿ, ಕಾಮಗಾರಿ ಪ್ರಾರಂಭಿಸುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಬೆಂಗಳೂರು ಸಬ್ ಅರ್ಬನ್ ರೈಲ್ವೆ ಆದಷ್ಟು ಬೇಗ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೆ-ರೈಡ್ ಮತ್ತು ಕರ್ನಾಟಕದ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ತ್ವರಿತಗತಿಯಲ್ಲಿ ಮುಗಿಸುವಂತೆ ಮನವಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *