ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮೋದಿಗೆ ಸಿಎಂ ಪತ್ರ

Public TV
1 Min Read

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಶತಮಾನಗಳಷ್ಟು ಹಳೆಯದಾದ ತುಮಕೂರಿನ ಸಿದ್ದಗಂಗಾ ಮಠ ಕಳೆದ 600 ವರ್ಷಗಳಿಂದ ಶಿಕ್ಷಣ, ಅನ್ನ ದಾಸೋಹ ಮಾಡುತ್ತಾ ಬಂದಿದೆ. ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾಗಿರುವ ಶತಾಯುಶಿ, ಶಿಕ್ಷಣ, ಅನ್ನದಾಸೋಹದ ಪ್ರಮುಖ ರೂವಾರಿ ಸಿದ್ದಗಂಗಾ ಶ್ರೀಗಳ ಕೊಡುಗೆ ಅನನ್ಯವಾಗಿದೆ. ಅವರು ಈಗ 110 ವರ್ಷಗಳನ್ನು ಪೂರೈಸಿದ್ದಾರೆ. ಆದ್ದರಿಂದ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಕ್ಕೆ ಆಯ್ಕೆ ಮಾಡಬೇಕೆಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಲ್ಲ ಸಮುದಾಯದ ಕಡುಬಡವ ಮಕ್ಕಳಿಗೆ ಅನ್ನ ದಾಸೋಹ ಮಾಡುವ ಮೂಲಕ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನಾಗಿ ಮಾಡಿದ ಕೀರ್ತಿ ಸ್ವಾಮೀಜಿಗೆ ಸಲ್ಲುತ್ತದೆ. ಸಿದ್ದಗಂಗಾ ಮಠ ಎಲ್ಲ ಹಂತದ ಶಿಕ್ಷಣವನ್ನು ಬಡವ ಬಲ್ಲಿದರೆಂಬ ಭೇದವಿಲ್ಲದೆ ಶಿಕ್ಷಣವನ್ನು ಉಚಿತವಾಗಿ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೇ ಉನ್ನತ ಅಧ್ಯಯನಕ್ಕೆ ಪ್ರೋತ್ಸಾಹವನ್ನು ಸಹ ನೀಡುತ್ತದೆ. ಇದರಿಂದ ದೇಶದ ಉದ್ದಗಲಕ್ಕೂ ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿದ್ದಾರೆ. ಇದು ಅವರ ನಿಸ್ವಾರ್ಥ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

ಇಂದಿಗೂ ಸಿದ್ದಗಂಗಾ ಮಠ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ, ಶಿಕ್ಷಣ ಜೊತೆಗೆ ಉಚಿತ ಪ್ರಸಾದವನ್ನು ನೀಡುತ್ತಾ ಬಂದಿದೆ. ದೇಶದಲ್ಲೇ ಅತ್ಯುನ್ನತ ಶಿಕ್ಷಣ ಸಂಸ್ಥೆ ಎಂದು ಖ್ಯಾತಿಯಾಗಿದೆ. ಇದರ ರೂವಾರಿಯಾಗಿರುವ ಡಾ. ಶಿವಕುಮಾರ ಸ್ವಾಮೀಜಿ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಶಿಫಾರಸು ಮಾಡಬೇಕೆಂದು ರಾಜ್ಯದ ಪರವಾಗಿ ನಾನು ವಿನಂತಿಸಿಕೊಳ್ಳುತ್ತಿದ್ದೆನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *