ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸುಧಾಕರ್ ರಾಜೀನಾಮೆಗೆ ಎಎಪಿ ಆಗ್ರಹ

By
2 Min Read

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ವಿವಿಧ ಅಕ್ರಮಗಳಿಗೆ ಸಂಬಂಧಿಸಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ. ಸುಧಾಕರ್‌ರವರಿಂದ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.

ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಆರೋಗ್ಯ ಇಲಾಖೆಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ, ಬಡ್ತಿ ಹಾಗೂ ವರ್ಗಾವಣೆಯಲ್ಲಿ ಭ್ರಷ್ಟಾಚಾರವು ಎಗ್ಗಿಲ್ಲದೇ ನಡೆಯುತ್ತಿದೆ. ವೈದ್ಯಕೀಯ ಉಪಕರಣಗಳು ಹಾಗೂ ಔಷಧಿಗಳ ಖರೀದಿ, ನಿರ್ಮಾಣ ಕಾಮಗಾರಿ, ಹಾಗೂ ಮೂಲಸೌಕರ್ಯ ಕಲ್ಪಿಸುವುದರಲ್ಲಿ ಭಾರೀ ಪ್ರಮಾಣದ ಅಕ್ರಮವಾಗುತ್ತಿದೆ. ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಪಡೆಯಲು ರೋಗಿಗಳು ಲಂಚ ನೀಡಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧಭೂಮಿಯಿಂದ ಕನ್ನಡಿಗರನ್ನು ಕರೆತಂದದ್ದು ಮೋದಿ ಭಗೀರಥ ಪ್ರಯತ್ನ: ಸಿಎಂ

ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಹಾಗೂ ಬಿಜೆಪಿಯ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿಯವರು ಕೋವಿಡ್ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಹಾಗೂ ಔಷಧಿ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ 40 ದೂರು ನೀಡಿದ್ದಾರೆ. ಈ ಸಂಬಂಧ ತನಿಖೆಯೇ ನಡೆಯದಿರುವುದು ದುರದೃಷ್ಟಕರ. ಆರೋಗ್ಯ ಸಚಿವರು ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆ ನಡೆದರೆ ಆರೋಗ್ಯ ಇಲಾಖೆಯಲ್ಲಿನ ಕೋಟಿಗಟ್ಟಲೆ ಅವ್ಯವಹಾರ ಬಯಲಾಗುತ್ತದೆ. ರಾಜ್ಯಪಾಲರು ಶೀಘ್ರವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಎಎಪಿಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ರವಿಶಂಕರ್ ಮಾತನಾಡಿ, ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಹಣದ ದಾಹಕ್ಕೆ ಸಾಮಾನ್ಯ ರೋಗಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಿಂದ ರೋಗಿಯ ಶವವನ್ನು ಹೊರತರಬೇಕಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಂಚ ನೀಡಬೇಕಾಗಿದೆ. ಆರೋಗ್ಯ ಇಲಾಖೆಯ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರುವುದು ಸಾಮಾನ್ಯವಾಗಿದ್ದರೂ, ಯಾರ ವಿರುದ್ಧವೂ ತನಿಖೆ ನಡೆಯುತ್ತಿಲ್ಲ. ಭಷ್ಟ ಸಚಿವರಿಂದಾಗಿ ಇಲಾಖೆಯ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರು ಸಜೀವ ದಹನ ಓರ್ವ ಗಂಭೀರ

ಆಮ್ ಆದ್ಮಿ ಪಾರ್ಟಿ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ರಾಜಶೇಖರ್ ದೊಡ್ಡಣ್ಣ ಹಾಗೂ ಪಕ್ಷದ ಮಹಿಳಾ ಮುಖಂಡರಾದ ಅರ್ಚನಾ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *