ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ತನಿಖೆಯಿಂದ ಪಾರಾದ ಡಿಕೆಶಿ 

Public TV
2 Min Read

ರಾಜ್ಯ ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್‌ನಲ್ಲಿ ಬಗೆಹರಿಯುವುದು ಸೂಕ್ತ – ಹೈಕೋರ್ಟ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ (Disproportionate assets case) ಡಿಸಿಎಂ ಡಿ.ಕೆ ಶಿವಕುಮಾರ್‌ಗೆ (D.K Shivakumar) ಹೈಕೋರ್ಟ್‍ನಿಂದ (High court) ಬಿಗ್ ರಿಲೀಫ್ ಸಿಕ್ಕಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಪ್ರಕರಣವನ್ನು ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶಿಸಿದೆ.

ಇದು ರಾಜ್ಯ ಸರ್ಕಾರ ಹಾಗೂ ಸಿಬಿಐ ಮಧ್ಯೆಯ ವಿವಾದ ಆಗಿದೆ. ಹೀಗಾಗಿ ಅರ್ಟಿಕಲ್ 131 ಪ್ರಕಾರ ಈ ವಿಚಾರ ಸುಪ್ರೀಂಕೋರ್ಟ್‌ಗೆ ಮಾತ್ರ ತೀರ್ಮಾನ ಮಾಡುವ ಅಧಿಕಾರ ಇದೆ. ಸುಪ್ರೀಂಕೋರ್ಟ್‌ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ (Disproportionate Assets Case) ಸಿಬಿಐಗೆ (CBI) ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಆ.12 ರಂದು ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಿದ್ದಿದ್ದು ಸರ್ಕಾರದ ನಿರ್ಧಾರದ ವಿರುದ್ಧ ಸಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಡಿ.ಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‍ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ. ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‍ಐಆರ್‌ನಲ್ಲಿ ಉಲ್ಲೇಖಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿ.ಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿ.ಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಇದೇ ವೇಳೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.

ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

Share This Article