ಜನದಟ್ಟಣೆ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಿ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸಲಹೆ

Public TV
1 Min Read

ಮಡಿಕೇರಿ: ಕೊರೊನಾ ವೈರಸ್ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್‍ಗಳು, ಹೋಂ ಸ್ಟೇಗಳು ಹಾಗೂ ಹೋಟೆಲ್‍ಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ನೀಡಿದ್ದಾರೆ.

ಕೊರೊನಾ ವೈರಸ್ ಬೆಂಗಳೂರಿನಲ್ಲಿ ಕಂಡು ಬಂದಿರುವ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಹ ಇನ್ನಷ್ಟು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಕೊರೊನಾ ವೈರಸ್ ಸಂಬಂಧಿಸಿದಂತೆ ಪ್ರವಾಸಿ ತಾಣಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು. ಈಗಾಗಲೇ ಜಿಲ್ಲೆಯ ಕರಿಕೆ, ಕುಟ್ಟ ಹಾಗೂ ಮಾಕುಟ್ಟ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಅದೇ ರೀತಿ ಜಿಲ್ಲೆಯ ವಿವಿಧ ಜನದಟ್ಟಣೆ ಸ್ಥಳಗಳಲ್ಲಿಯೂ ಈ ಬಗ್ಗೆ ಮುತುವರ್ಜಿ ವಹಿಸಬೇಕಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್ ಅವರು ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ವೈರಸ್ ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಹಾಗೆಯೇ ಪೋಸ್ಟರ್, ಬ್ಯಾನರ್, ಪ್ರವಾಸಿ ತಾಣಗಳು, ಗಡಿ ಪ್ರದೇಶ ಸೇರಿದಂತೆ ಜಿಲ್ಲೆಯ ಜನದಟ್ಟಣೆ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.

ವಿದೇಶದಿಂದ ಬರುವವರ ಬಗ್ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಅವರಿಗೆ (94498 43263) ಕಡ್ಡಾಯವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು. ಹಾಗೆಯೇ 104 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಅವರು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *