ನವದೆಹಲಿ: ಅನಾರೋಗ್ಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ (Jagdeep Dhankhar) ರಾಜೀನಾಮೆ ನೀಡಿದ 2 ದಿನಗಳ ನಂತರ, ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ (Election Commission) ಶುರು ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಆಯೋಗದ ಪ್ರಕಟಣೆಯಲ್ಲಿ ಏನಿದೆ?
ಭಾರತದ ಚುನಾವಣಾ ಆಯೋಗವು, ವಿಧಿ 324ರ ಅಡಿಯಲ್ಲಿ, ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ (Vice Presidential Election) ನಡೆಸುವ ಅಧಿಕಾರವನ್ನು ಹೊಂದಿದೆ. ಭಾರತದ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆಯನ್ನು ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆ, 1952 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು, ಅಂದ್ರೆ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳು, 1974ರ ಮೂಲಕ ನಿಯಂತ್ರಿಸಲಾಗುತ್ತದೆ.
ಅದರಂತೆ ಭಾರತೀಯ ಚುನಾವಣಾ ಆಯೋಗವು 2025ರ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಈ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡ ಬಳಿಕ, ಚುನಾವಣಾ ವೇಳಾಪಟ್ಟಿಯನ್ನ ಆದಷ್ಟು ಬೇಗ ಘೋಷಿಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
74 ವರ್ಷದ ಧನಕರ್ ಅವರು ಅನಾರೋಗ್ಯ ಕಾರಣ ನೀಡಿ ಸೋಮವಾರ (ಜು.21) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಈ ವೇಳೆ ಅವಕಾಶಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿದ್ದರು.
ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್ 10ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.