ಭೂಪೇಂದ್ರ ಯಾದವ್ ಭೇಟಿ ಮಾಡಿದ ಈಶ್ವರ್ ಖಂಡ್ರೆ – ಹುಲಿ ಅಭಯಾರಣ್ಯ ಬಾಕಿ ಹಣ ಬಿಡುಗಡೆಗೆ ಮನವಿ

Public TV
2 Min Read

ನವದೆಹಲಿ: ಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2022-23ನೇ ಸಾಲಿನಲ್ಲಿ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂ. ಬಾಕಿ ಬರಬೇಕಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ (Bhupender Yadav) ಅವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ಈಶ್ವರ್ ಖಂಡ್ರೆ, ಹುಲಿ ಯೋಜನೆಯಡಿ ಕಾಳಿ, ಭದ್ರಾ, ನಾಗರಹೊಳೆ, ಬಂಡಿಪುರ ಮತ್ತು ಬಿಳಿಗಿರಿ ರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು 61 ಕೋಟಿ ರೂ. ಸೇರಿ ಒಟ್ಟು ಸುಮಾರು 91.99 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಕೋರಿದ್ದು, ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಈಶ್ವರ್ ಖಂಡ್ರೆ (Eshwara Khandre) ತಿಳಿಸಿದ್ದಾರೆ.

ಅರಣ್ಯ ರಕ್ಷಣೆ ಮತ್ತು ವಿಸ್ತರಣೆಗಾಗಿ ಕಾಂಪಾ ನಿಧಿಯಡಿ 2023-24ರ ಸಾಲಿನಲ್ಲಿ ರಾಜ್ಯದಿಂದ ಸುಮಾರು 362 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪೈಕಿ 140 ಕೋಟಿ ರೂ.ಗೆ ಮಾತ್ರ ಮಂಜೂರಾತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಳಿದ 222 ಕೋಟಿ ರೂ. ಬಾಕಿ ನಿಧಿಯ ಮಂಜೂರಾತಿಗೂ ಮನವಿ ಮಾಡಲಾಗಿದ್ದು, ಇದಕ್ಕೆ ಅಗತ್ಯವಾದ ಎಲ್ಲ ನಿಬಂಧನೆಗಳನ್ನೂ ಪೂರೈಸಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ದುರುದ್ದೇಶದಿಂದಲೇ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆ ಅಕ್ಕಿ ನೀಡುತ್ತಿಲ್ಲ: ಖಂಡ್ರೆ ವಾಗ್ದಾಳಿ

ನಗರ-ವನ ಯೋಜನೆ ಅಡಿ ರಾಜ್ಯದ 9 ನಗರಗಳಿಗಾಗಿ 26 ಕೋಟಿ 70 ಲಕ್ಷ ರೂ. ಯೋಜನೆ ಅನುಮೋದನೆ ನೀಡುವಂತೆಯೂ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದ್ದು, ಭೂಪೇಂದ್ರ ಯಾದವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇದನ್ನೂ ಓದಿ: ಫೇಕ್ ನ್ಯೂಸ್‌ಗಳ ಮೂಲ ಪತ್ತೆಹಚ್ಚಿ- ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Share This Article