ಪಂಚರಾಜ್ಯ ಚುನಾವಣೆ: ಯೋಗಿ, ಅಖಿಲೇಶ್‌ ಮುನ್ನಡೆ- ಗೋವಾ, ಪಂಜಾಬ್‌ ಸಿಎಂ ಹಿನ್ನಡೆ

Public TV
1 Min Read

ನವದೆಹಲಿ: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ್‌, ಗೋವಾ, ಮಣಿಪುರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಐದೂ ರಾಜ್ಯಗಳಲ್ಲಿ ಹಲವರು ಪ್ರಮುಖರು ಮುನ್ನಡೆ ಹಾಗೂ ಕೆಲವರು ಹಿನ್ನಡೆ ಅನುಭವಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಯ ಭವಿಷ್ಯದ ಮುನ್ನುಡಿ ಎಂದೇ ಬಿಂಬಿತವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, 5 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಕೂಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಹಾವು-ಏಣಿಯ ಆಟದಂತೆ ಪೈಪೋಟಿ ಮುಂದುವರಿದಿದೆ. ಗೋವಾ ಹಾಲಿ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು 436 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಪಂಜಾಬ್‌ನಲ್ಲಿ ಆಂತರಿಕ ಕಲಹದಿಂದಾಗಿ ಕಾಂಗ್ರೆಸ್‌ ತೊರೆದಿದ್ದ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ 1,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕ್ಯಾಪ್ಟನ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅಧಿಕಾರಕ್ಕೇರಿದ ದಲಿತ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಅಮೃತಸರ ಪೂರ್ವದಲ್ಲಿ ನವಜೋತ್‌ ಸಿಂಗ್‌ ಸಿಧು ಹಿನ್ನಡೆ ಅನುಭವಿಸಿದ್ದಾರೆ. ಪ್ರಕಾಶ್‌ ಸಿಂಗ್‌ ಬಾದಲ್‌ ಅವರು ಸಹ ಹಿನ್ನಡೆಯಲ್ಲಿದ್ದಾರೆ.

ಇನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *