ಎರಡು ಹೆಚ್ಚುವರಿ SDRF ತಂಡ ರಚನೆ: ಬೊಮ್ಮಾಯಿ ಸೂಚನೆ

Public TV
3 Min Read

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್‍ಡಿಆರ್‍ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಈಗಾಗಲೇ ಎನ್.ಡಿ.ಆರ್.ಎಫ್. ಹಾಗೂ ಎಸ್.ಡಿ.ಆರ್.ಎಫ್. ತಂಡಗಳನ್ನು ನಿಯೋಜಿಸಿದ್ದು, ಜಿಲ್ಲಾಧಿಕಾರಿಗಳು ಈ ತಂಡದೊಂದಿಗೆ ನಿಕಟ ಸಂಪರ್ಕ ಹೊಂದಿ, ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

200 ಕೋಟಿ ರೂ. ಬಿಡುಗಡೆ: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜೀವಹಾನಿ, ಮನೆ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳ ದುರಸ್ತಿಯನ್ನು ಕೂಡಲೇ ಕೈಗೊಂಡು, ಸಂಪರ್ಕ ಮರುಸ್ಥಾಪಿಸಬೇಕು. ಅಂತೆಯೇ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್‌ಗಳ ಹಾನಿ ಕುರಿತು ಜಾಗೃತರಾಗಿ, ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತ್ವರಿತವಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಕ್ಕಾಗಿ ಎಸ್ಕಾಂಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚುವರಿ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್‌ಗಳ ದಾಸ್ತಾನು ಖಾತರಿಪಡಿಸಲು ಸೂಚಿಸಿದರು.

ಬೆಳೆಹಾನಿ ಜಂಟಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ, ಬೆಳೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಹಾನಿ ಸಮೀಕ್ಷೆ ವಾಸ್ತವಿಕವಾಗಿರಬೇಕು ಎಂದರು. ಇದನ್ನೂ ಓದಿ: ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ- ವರ್ಕ್ಫ್ ಬೋರ್ಡ್ ಅರ್ಜಿ ವಜಾಗೊಳಿಸಿದ ಬಿಬಿಎಂಪಿ

ದಿಢೀರ್ ಪ್ರವಾಹ ಮುನ್ನೆಚ್ಚರಿಕೆ: ಗದಗ ಜಿಲ್ಲೆಯ ಬೆಣ್ಣಿಹಳ್ಳ, ಹಾವೇರಿ ಜಿಲ್ಲೆಯ ವರದಾ ನದಿ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಾಗ ಆಣೆಕಟ್ಟುಗಳ ಕೆಳ ಭಾಗದ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಬೇಕು. ರಾಜ್ಯದ ಹಲವಾರು ಕೆರೆಗಳು ತುಂಬಿದ್ದು, ಅಪಾಯದ ಅಂಚಿನ ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಭೂಕುಸಿತ: ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಣ್ಣಿನ ಕುಸಿತ, ಭೂಕುಸಿತದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಜನರನ್ನು ಕಡ್ಡಾಯವಾಗಿ ಸ್ಥಳಾಂತರಿಸಬೇಕು. ರಸ್ತೆಗಳ ಮೇಲೆ ಭೂಕುಸಿತ ಉಂಟಾದಲ್ಲಿ ತೆರವುಗೊಳಿಸಲು ತಂಡಗಳನ್ನು ದಿನದ 24 ಗಂಟೆಯೂ ಸನ್ನದ್ಧವಾಗಿರಬೇಕು ಎಂದು ಆದೇಶಿಸಿದರು.

ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಆಹಾರ ಒದಗಿಸಬೇಕು. ಕಾಳಜಿ ಕೇಂದ್ರಕ್ಕೆ ಬರದ ನಿರಾಶ್ರಿತರಿಗೆ ಡ್ರೈರೇಷನ್ ಕಿಟ್ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಇದನ್ನೂ ಓದಿ: ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಆಯ್ಕೆ

ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಡಾ.ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣಗೌಡ, ಗೋಪಾಲಯ್ಯ, ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ನಡೆದ ಸಭೆಯಲ್ಲಿ ಜೂನ್ 1 ರಿಂದ ಆ.6ರವರೆಗೆ ಹಾನಿ ಪ್ರಮಾಣ ಈ ರೀತಿ ಇದೆ. 70 ಜನರು ಬಲಿ, 507 ಜಾನುವಾರು ಬಲಿ, 3,559 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 17,212 ಮನೆಗಳು ಭಾಗಶಃ ಹಾನಿಯಾಗಿದೆ. 1,29,087 ಹೆಕ್ಟೇರ್ ಕೃಷಿ ಬೆಳೆ ಹಾಗೂ 7,942 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿಯಾಗಿವೆ.

3,162 ಕಿ.ಮೀ ರಸ್ತೆಗಳು ಹಾಗೂ 8,445 ಕಿ.ಮೀ ಗ್ರಾಮೀಣ ರಸ್ತೆ ಹಾನಿಯಾಗಿವೆ. ಜೊತೆಗೆ 1,068 ಸೇತುವೆಗಳು ಹಾನಿಯಾಗಿವೆ. 4,531 ಶಾಲೆಗಳು ಹಾಗೂ 222 ಅಂಗನವಾಡಿಗಳು ಹಾನಿಯಾಗಿದ್ದು, 16,760 ವಿದ್ಯುತ್ ಕಂಬಗಳು ಹಾಗೂ 1,469 ಟ್ರಾನ್ಸ್ ಫಾರ್ಮರ್‌ಗಳು ಹಾಳಾಗಿದೆ. 409 ಕಿ.ಮೀ ವೈಯರ್‌ಗಳು ಹಾಗೂ 93 ಸಣ್ಣ ನೀರಾವರಿ ಕೆರೆಗಳು ಹಾನಿಯಾಗಿದೆ.

ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಆ. 2ರ ಮಾಹಿತಿಯಂತೆ ಒಟ್ಟು 657 ಕೋಟಿ ರೂ. ಲಭ್ಯವಿತ್ತು. ಇಂದು ರಾಜ್ಯ ಸರ್ಕಾರ 21 ಜಿಲ್ಲೆಗಳಿಗೆ ಒಟ್ಟು 200 ಕೋಟಿ ರೂ. ಬಿಡುಗಡೆ ಮಾಡಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *