ಡಿಕೆಶಿ ಬಂಧನ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ: ಬಿಜೆಪಿ ವಿರುದ್ಧ ಎಚ್‍ಡಿಕೆ ಕಿಡಿ

Public TV
1 Min Read

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಯಾವುದೇ ಪ್ರತಿಪಕ್ಷ ಇರಬಾರದು ಎನ್ನುವುದೇ ಡಿ.ಕೆ.ಶಿವಕುಮಾರ್ ಅವರ ಬಂಧನದ ಉದ್ದೇಶವಾಗಿದೆ. ಕಳೆದ ನಾಲ್ಕು ದಿನಗಳಿಂದ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿ, ಈಗ ಬಂಧನ ಮಾಡುವ ಅವಶ್ಯಕತೆ ಏನಿತ್ತು? ಕಾನೂನು ವ್ಯಾಪ್ತಿಯಲ್ಲಿ ಕ್ರಮ ತಗೆದುಕೊಳದೇ ಈ ರೀತಿ ಮಾಡುವುದು ತಪ್ಪು ಎಂದರು.

ಡಿಸಿಎಂ ಅಶ್ವಥ್ ನಾರಾಯಣ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ಮಲ್ಲೇಶ್ವರಂನಲ್ಲಿ ಏನೇನ್ ಲೂಟಿ ಹೊಡೆದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ದ್ವೇಷ ರಾಜಕೀಯ ಮಾಡಲ್ಲ ಎನ್ನುತ್ತಿದ್ದಾರೆ. ಆದರೆ ನನ್ನ ವಿಚಾರದಲ್ಲಿ ಆಗುತ್ತಿರುವುದು ಏನು? ಫೋನ್ ಕದ್ದಾಲಿಕೆ ನಡೆದಿದೆ ಅಂತ ತನಿಖೆಗೆ ಆದೇಶ ನೀಡಿದ್ದಾರೆ. ಯಾವ್ ತನಿಖೆ ಆದರೂ ಮಾಡಲಿ ಸಿಬಿಐ ಅಲ್ಲ, ಇಂಟರ್ ನ್ಯಾಷನಲ್ ಸಂಸ್ಥೆಯಿಂದ ತನಿಖೆ ಮಾಡಿಸಲಿ ನನಗೇನು ಭಯವಿಲ್ಲ ಎಂದು ಗುಡುಗಿದರು.

ಟ್ವೀಟ್ ಕೂಡ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಅವರು, ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬದ ಆಚರಣೆಗೂ ಅವಕಾಶ ನೀಡದೆ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಿಡಿಕಾರಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *