ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

0 Min Read

ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) (Shamanur Shivashankarappa) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

94 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಹ ಇತ್ತೀಚೆಗೆ ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು. ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅಭಿಮಾನಿಳಿಂದ ಪ್ರಾರ್ಥನೆ ನೆರವೇರಿತ್ತು. ದುರದೃಷ್ಟವಶಾತ್‌ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1931ರಲ್ಲಿ ಜನನ
ಶಾಮನೂರ್ ಶಿವಶಂಕರಪ್ಪ ಅವರು 1931 ಜೂನ್‌ 16ರಂದು ಶಾಮನೂರು ಕಲ್ಲಪ್ಪ – ಶಾಮನೂರು ಸಾವಿತ್ರಮ್ಮ ದಂಪತಿ ಪುತ್ರನಾಗಿ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಪತ್ನಿ ಪಾರ್ವತಮ್ಮ. ಮೃತರು ನಾಲ್ವರು ಪುತ್ರಿಯರಾ ಡಾ. ಮಂಜುಳಾ ಶಿವಶಂಕರ್, ಸುಧಾ ಪಾಟೀಲ್, ಡಾ. ಶೈಲಜಾ ಭಟ್ಟಾಚಾರ್ಯ, ಮೀನಾ ಡಾ. ಶರಣ್‌ ಪಾಟೀಲ್ ಹಾಗೂ ಮೂವರು ಗಂಡು ಮಕ್ಕಳಾದ ಎಸ್.ಎಸ್ ಬಕ್ಕೇಶ್, ಎಸ್.ಎಸ್ ಗಣೇಶ್, ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ.

ಶಾಮನೂರರ ರಾಜಕೀಯ ಬದುಕು
ಶಾಮನೂರು ಶಿವಶಂಕರಪ್ಪನವರು 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. 1971 ರಿಂದ 1973ರ ವರೆಗೆ ಅವಿಭಜಿತ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1980ರಲ್ಲಿ ಲೋಕಸಭಾ ಚುನಾವಣೆಗೆ ಅರಸು ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇಂದಿರಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಟಿ.ವಿ ಚಂದ್ರಶೇಖರಪ್ಪರ ವಿರುದ್ಧ ಪರಾಭವಗೊಂಡರು. ಇದಾದ ಬಳಿಕ 1994ರಲ್ಲಿ ನಡೆದ 10ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಖಾಡಕ್ಕಿಳಿದ ಅವರು ಬಿಜೆಪಿ ಅಭ್ಯರ್ಥಿ ಕೆ.ಬಿ ಶಂಕರನಾರಾಯಣರನ್ನ ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

1997 ರಲ್ಲಿ ಲೋಕಸಭಾ ಚುನಾವಣೆಗೆ ಸ್ಫರ್ಧಿಸಿದ ಶಿವಶಂಕರಪ್ಪ, ಬಿಜೆಪಿ ಅಭ್ಯರ್ಥಿ ಜಿ.ಮಲ್ಲಿಕಾರ್ಜುನಪ್ಪ ಅವರನ್ನ ಸೋಲಿಸಿ ಸಂಸದರಾದರು. 2004 ರಲ್ಲಿ ಶಿವಶಂಕರಪ್ಪ 2ನೇ ಬಾರಿ ಶಾಸಕರಾಗಿ ಆಯ್ಕೆಯಾದರು. ಆ ನಂತ್ರ 2008 ರಲ್ಲಿ 3ನೇ ಬಾರಿಗೆ. 2013 ರಲ್ಲಿ 4ನೇ ಬಾರಿಗೆ, 2018ರಲ್ಲಿ 5ನೇ ಬಾರಿಗೆ ಹಾಗೂ 2023ರಲ್ಲಿ 6ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2013 ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಸಂಪುಟದಲ್ಲಿ ಎರಡೂವರೆ ವರ್ಷ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Share This Article