ಬಿಎಸ್‍ವೈ ಬರ್ತ್ ಡೇ ಗಿಫ್ಟ್ – ಮಹದಾಯಿ ನೋಟಿಫಿಕೇಷನ್ ಹೊರಡಿಸಿದ ಕೇಂದ್ರ

Public TV
2 Min Read

ನವದೆಹಲಿ: ಉತ್ತರ ಕರ್ನಾಟಕ ಜನರ ಬಹುದಿನಗಳ ಕನಸು ಈಡೇರಿದೆ. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣ ನೀಡಿದ್ದ ಐ ತೀರ್ಪಿಗೆ ಕೇಂದ್ರ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ನೋಟಿಫಿಕೇಷನ್ ಹೊರಡಿಸಲಾಗಿದೆ.

ಸುಪ್ರೀಂ ಕೋರ್ಟಿಗೆ ಹೆಚ್ಚುವರಿ ನೀರಿಗೆ ಆಗ್ರಹಿಸಿ ಕರ್ನಾಟಕ ಗೋವಾ ಮತ್ತು ಮಹಾರಾಷ್ಟ್ರ ಅರ್ಜಿ ಸಲ್ಲಿಸಿರುವ ಹಿನ್ನಲೆ ಕೋರ್ಟಿನ ಅಂತಿಮ ತೀರ್ಪಿಗೆ ಒಳಪಟ್ಟು ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದಾಗಿ ರಾಜ್ಯಕ್ಕೆ ಹಂಚಿಕೆಯಾಗಿದ್ದ 13.5 ಟಿಎಂಸಿ ನೀರನ್ನು ನಿರಾತಂಕವಾಗಿ ಬಳಸಿಕೊಳ್ಳಬಹುದಾಗಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ ಪಡೆದು ನದಿ ಕಣಿವೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಮತ್ತು ಜಲ ವಿದ್ಯುತ್ ಯೋಜನೆಗಳ ಕಾಮಗಾರಿ ಆರಂಭಿಸಬಹುದಾಗಿದೆ.

ಸುದೀರ್ಘ ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯದಿಕರಣ 2018ರ ಅಗಸ್ಟ್ 14 ರಂದು ತನ್ನ ಐ ತೀರ್ಪು ಪ್ರಕಟಿಸಿತ್ತು. ಕರ್ನಾಟಕದ ಪಾಲಿಗೆ ಮಹದಾಯಿ ನದಿಯಿಂದ 13.5 ಟಿಎಂಸಿ ನೀರು ಹಂಚಿಕೆ ಮಾಡಿತ್ತು. ಇದರಲ್ಲಿ ಮಹದಾಯಿಯಿಂದ ಮಲಪ್ರಭೆಗೆ ಕುಡಿಯುವ ನೀರಿಗಾಗಿ 4 ಟಿಎಂಸಿ ನೀರು ಹರಿಸಲು ಒಪ್ಪಿಗೆ ಸೂಚಿಸಿತ್ತು. ಮಹದಾಯಿ ನದಿಯಿಂದ ಕರ್ನಾಟಕಕ್ಕೆ 12 ಟಿಎಂಸಿ ನೀಡಿದ್ದ ನ್ಯಾಯದಿಕರಣ ಬಂಡೂರ ಯೋಜನೆಗೆ ಒಟ್ಟು 2.18 ಟಿಎಂಸಿ, ಕಳಸಾ ಯೋಜನೆಗೆ 1.72 ಟಿಎಂಸಿ, ಜಲ ವಿದ್ಯುತ್ ಯೋಜನೆಗೆ 8.02 ಟಿಎಂಸಿ, ಕಳಸಾ ಯೋಜನೆಗೆ 1.72 ಟಿಎಂಸಿ ಮತ್ತು ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು ಮಹದಾಯಿ ನದಿ ಕಣಿವೆಯಲ್ಲಿ ಬಳಸಲು 1.5 ಟಿಎಂಸಿ ನೀರು ಹಂಚಿಕೆ ಮಾಡಿತ್ತು.

ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಶೇಖಾವತ್ ಗೆ ಟ್ವೀಟ್ ಮಾಡಿ ಧನ್ಯವಾದ ಹೇಳಿದ್ದಾರೆ.

ಬುಧವಾರ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿತೆ ಕೇಂದ್ರ ಸಚಿವರ ನಿಯೋಗ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿ ಅಧಿಸೂಚನೆ ಹೊರಡಿಸಲು ಮನವಿ ಮಾಡಿದ್ದರು.

ಗೋವಾ ಖ್ಯಾತೆ: ಅಧಿಸೂಚನೆ ಒಪ್ಪಿಗೆ ಸೂಚಿಸಿದ್ದ ಗೋವಾ ಈಗ ಹೊಸ ಆಟ ಶುರು ಮಾಡಿದೆ. ಮಹದಾಯಿ ಕಣಿವೆ ವ್ಯಾಪ್ತಿಯಲ್ಲಿ ಯೋಜನೆಗಳಿಗೆ ಅನುಮತಿ ನೀಡದಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ.

Share This Article
Leave a Comment

Leave a Reply

Your email address will not be published. Required fields are marked *