ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

Public TV
2 Min Read

ನವದೆಹಲಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್ ಇಂದು ಕೊನೆಯುಸಿರೆಳೆದರು. ಸೇನಾಧಿಕಾರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ದೇಶಕ್ಕಾಗಿ ಹೆಮ್ಮೆ, ಶೌರ್ಯ ಮತ್ತು ವೃತ್ತಿಪರತೆಯಿಂದ ಸೇವೆ ಸಲ್ಲಿಸಿದರು. ಅವರ ನಿಧನದಿಂದ ಮನಸ್ಸಿಗೆ ಅತೀವ ನೋವುಂಟಾಗಿದೆ. ದೇಶಕ್ಕೆ ಅವರು ನೀಡಿದ ಉತ್ಕೃಷ್ಟ ಸೇವೆಯನ್ನು ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಓಂ ಶಾಂತಿ.. ಎಂದು ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದರು ಎಂದು ತಿಳಿದು ದುಃಖವಾಯಿತು. ಶೌರ್ಯ ಮತ್ತು ಅದಮ್ಯ ಧೈರ್ಯದ ಸೈನಿಕ ಮನೋಭಾವವನ್ನು ಪ್ರದರ್ಶಿಸಿದ ಸೇನಾಧಿಕಾರಿ. ಅವರ ಸೇವೆಗೆ ದೇಶ ಆಭಾರಿಯಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡಿ, ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಅತೀವ ನೋವುಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬದವರಿಗೆ ಒದಗಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೀವನ್ಮರಣ ಹೋರಾಟ ನಡೆಸುತ್ತಿರುವ ವರುಣ್ ಸಿಂಗ್ ಬರೆದಿದ್ದ ಸ್ಫೂರ್ತಿದಾಯಕ ಪತ್ರ ವೈರಲ್

ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರ ಸ್ನೇಹಿತರು ಮತ್ತು ಕುಟುಂಬಕ್ಕೆ ನನ್ನ ಸಂತಾಪಗಳು. ಇದು ದೇಶಕ್ಕೆ ದುಃಖದ ಕ್ಷಣ. ಈ ದುಃಖದಲ್ಲಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ – ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ

ಡಿ.8ರಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರನ್ನು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟರು.

Share This Article
Leave a Comment

Leave a Reply

Your email address will not be published. Required fields are marked *