ನಸುಕಿನಲ್ಲಿ ಸುಪ್ರಭಾತ, ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ, ಇಂದಿನದಲ್ಲ: ಕುಮಾರಸ್ವಾಮಿ

Public TV
3 Min Read

– ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ಕುರಿತು ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಬಾಲ್ಯದಿಂದ ನೋಡುತ್ತಿದ್ದ ವಿಷಯ ಮತ್ತು ಪ್ರಧಾನಿ ನರೇಂದ್ರ ಮೋದಿ ಆಶಯ ಕುರಿತು ಟ್ವಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಕುಮಾರಸ್ವಾಮಿ ಟ್ವೀಟ್‍ನಲ್ಲಿ ಏನಿದೆ?
ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ಇವು ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು. ಇದನ್ನೂ ಓದಿ: ಮನೆಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿ

ಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ ಹಾಡಿರುವ ‘ನಮೋ ವೆಂಕಟೇಶ..’ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ.

ಅಷ್ಟೇ ಅಲ್ಲ, ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ.

ನಸುಕಿನಲ್ಲಿ ಸುಪ್ರಭಾತ ಮತ್ತು ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ.

ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಗಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಗಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅದೂ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿದೆ. ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ.

ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ.

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ – ಮೂವರು ಆಸ್ಪತ್ರೆಗೆ ದಾಖಲು 

ದೇವಾಲಯಗಳಲ್ಲಿ ನಡೆಯುತ್ತಿದ್ದ ನಿತ್ಯ ಭಜನೆ, ಸುಪ್ರಭಾತ ವೇಳೆ ಕೇಳಿಬರುತ್ತಿದ್ದ ಶ್ಲೋಕ, ಕೀರ್ತನೆ, ಭಜನೆಗಳು ಕ್ರಮೇಣ ಕಣ್ಮರೆಯಾಗಿವೆ. ನಾವೆಲ್ಲರೂ ಸೇರಿ ಅವುಗಳ ಪುನರುದ್ಧಾರ ಮಾಡೋಣ. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ.

ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ ಎಂದು ಟ್ವೀಟ್ ಮಾಡುವ ಮೂಲಕ ಜನರಲ್ಲಿ ಮತ್ತು ರಾಜಕೀಯ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *