ಶಾಸಕ ಶಿವಲಿಂಗೇಗೌಡಗೆ ಗ್ರಾಮಸ್ಥರಿಂದ ಘೇರಾವ್

Public TV
1 Min Read

ಹಾಸನ: ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ತೆರಳಿದ್ದ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ (Shivalinge Gowda) ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ನಡೆದಿದೆ.

ಅರಸೀಕೆರೆಯ (Arsikere) ಕೆಂಕೆರೆ ಗ್ರಾಮದಲ್ಲಿ ಭಾನುವಾರ ರಾತ್ರಿ ಆರ್ಕೆಸ್ಟ್ರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಶಾಸಕ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ. ಬಳಿಕ ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದ್ದಾರೆ.

ಕುರುಬರ ಸಂಘದ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಕೇಶವಮೂರ್ತಿ, ಗ್ರಾಮಸ್ಥರು ಸಿಎಂ ಭೇಟಿಯಾಗಿ ಹೇಮಾವತಿ ನದಿಯಿಂದ ಕೆಂಕೆರೆ ಗ್ರಾಮದ ಕೆರೆ ತುಂಬಿಸುವ ಯೋಜನೆಗೆ ಅನುಮತಿ ಪಡೆದಿದ್ದರು. 22 ಕೋಟಿ ರೂ. ವೆಚ್ಚದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದರು. ಇದರಿಂದ ಕೆರಳಿದ್ದ ಶಾಸಕ ಕೆ.ಎಂ.ಶಿವಲಿಂಗೇಗೌಡ ಯೋಜನೆಯನ್ನು ರದ್ದು ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದೇ ವಿಚಾರಕ್ಕೆ ಗಣಪತಿ ವಿಸರ್ಜನೆ ಅಂಗವಾಗಿ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕರ ವಿರುದ್ಧ ಗ್ರಾಮಸ್ಥರು ತಿರುಗಿಬಿದ್ದಿದ್ದಾರೆ. ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಶಾಸಕರ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ತಳ್ಳಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಬಳಿಕ ಆರ್ಕೆಸ್ಟ್ರಾ ಕಾರ್ಯಕ್ರಮ ಅರ್ಧಕ್ಕೆ ನಿಂತಿದೆ.

Share This Article