ಬರಗಾಲದಲ್ಲಿ ಗ್ಯಾರಂಟಿ ಸಮಾವೇಶ – ಸಿಎಂ ವಿರುದ್ಧ ಹೆಚ್‍ಡಿಕೆ ಕೆಂಡ

Public TV
2 Min Read

ಬೆಂಗಳೂರು: ರಾಜ್ಯ ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ಬರಗಾಲವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಸಿದ್ದರಾಮಯ್ಯ (Siddaramaiah) ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿರುವುದು ಲಜ್ಜೇಗೇಡು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D.Kumaraswamy) ಟ್ವೀಟ್‍ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

`ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ’ ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ. ರಾಜ್ಯದ ಪಾಲಿನ ಝೀರೋ, ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ (Election) ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು ಒಂದೇ ಆ ಪರಮೇಶ್ವರನ ಮಾತು ಒಂದೇ. ಅದು ಎಂದೆಂದಿಗೂ ಸುಳ್ಳಾಗದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ, ಟಿಕೆಟ್ ಸಿಗುವ ವಿಶ್ವಾಸವಿದೆ: ಜಿಟಿಡಿ

ಬರಪೀಡಿತ ರೈತರಿಗೆ ಕೊಡಲು ಈ ನಿಮ್ಮ ಸರ್ಕಾರಕ್ಕೆ 2000 ರೂ. ಗತಿ ಇಲ್ಲ. ಗ್ಯಾರಂಟಿ ಸಮಾವೇಶಗಳಿಗೆ ಬೇಕಾದಷ್ಟು ಹಣವಿದೆ. ತುರ್ತು ಉದ್ದೇಶಕ್ಕೆ ಇರಿಸಿರುವ ಜಿಲ್ಲಾಧಿಕಾರಿ, ತಹಸೀಲ್ದಾರುಗಳ ಖಾತೆಗೆ ನಿಮ್ಮ ಸರ್ಕಾರ ಕನ್ನ ಹಾಕಿದೆ. ಜನರ ಹಾಹಾಕಾರವೇ ನಿಮಗೆ ಭರ್ಜರಿ ಆಹಾರ ಹೌದಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದಿರಿ ಸಿದ್ದರಾಮಯ್ಯನವರೇ? ಜನರ ಮುಂದೆ ಲೆಕ್ಕ ಇಡಿ. ಬೇಕಾದರೆ `ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ’ ಹೊರಡಿಸಿ. ನಿಮ್ಮ ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ. ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂಗಳ ಏಜೆನ್ಸಿಗಳ ಮೂಲಕ `ಜಾಹೀರಾತು ಜಾತ್ರೆ’ಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರದ ತೆವಲಿಗೆ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ ಭಾರೀ ಮಳೆ- 19 ಮಂದಿ ಸಾವು, ಹಲವರು ನಾಪತ್ತೆ

Share This Article