ಬಳ್ಳಾರಿ: ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಬಳ್ಳಾರಿ ಜಿಲ್ಲೆಯಲ್ಲಿ ಮುಂದುವರೆದಿದೆ.
ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಹಲವು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಭಾರೀ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲೂ ಸಹ ಶನಿವಾರ ರಾತ್ರಿ ಧಾರಕಾರವಾಗಿ ಸುರಿದ ಮಳೆಗೆ ಮೋರಗೇರಿ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದೆ. ಅಲ್ಲದೇ ಹಗರಿಬೊಮ್ಮನಹಳ್ಳಿ- ಹಡಗಲಿ ಮಾರ್ಗದ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು.
ಮೋರಗೇರಿ ಗ್ರಾಮದ ಹಲವು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನರು ಯುಗಾದಿ ಹಬ್ಬದ ದಿನದಂದು ಮನೆಗೆ ನುಗ್ಗಿದ ನೀರನ್ನು ಹೊರಹಾಕುವಲ್ಲಿ ನಿರತರಾಗಿದ್ದಾರೆ. ಬಿರುಬಿಸಿಲಿನ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಜಿಲ್ಲೆಯಲ್ಲಿ ತಂಪು-ತಂಪು ವಾತಾವರಣ ನಿರ್ಮಿಸಿದೆ.