-ಈವರೆಗೆ ಮಳೆ ಅವಾಂತರದಿಂದ 6 ಮಂದಿ ಸಾವು, 100ಕ್ಕೂ ಹೆಚ್ಚು ಜನ ಸ್ಥಳಾಂತರ
ಮುಂಬೈ: ಕಳೆದ 3 ದಿನಗಳಿಂದ ವಾಣಿಜ್ಯ ನಗರಿ ಮುಂಬೈನಲ್ಲಿ (Mumbai) ವರುಣಾರ್ಭಟ (Heavy Rain) ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ವಿಮಾನ, ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಇಂದು ಕೂಡ (ಆ.19) ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಶಾಲಾ-ಕಾಲೇಜು, ಆಫೀಸ್‌ಗಳಿಗೆ ರಜೆ ಘೋಷಿಸಲಾಗಿದೆ. ಜನರು ಮನೆಯಿಂದ ಹೊರಗೆ ಬರೋದಕ್ಕೂ ಯೋಚಿಸುವಂತೆ ಮಳೆ ಸುರಿಯುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.ಇದನ್ನೂ ಓದಿ: Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ
ಸೋಮವಾರ ರಾತ್ರಿಯಿಡೀ ನಿರಂತರವಾಗಿ ಮಳೆಯಾಗಿದ್ದು, ಮುಂಬೈ ತತ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವಾರು ಭಾಗಗಳಲ್ಲಿ 200 ಮಿ.ಮೀಗಿಂತ ಹೆಚ್ಚು ಮಳೆಯಾಗಿದ್ದು, ಪೂರ್ವ ಉಪನಗರ ವಿಖ್ರೋಲಿಯಲ್ಲಿ 255.5 ಮಿ.ಮೀಗಿಂತ ಹೆಚ್ಚು ಮಳೆಯಾಗಿದೆ. ಮಳೆ, ಮಂಜಿನಿಂದಾಗಿ ರೈಲು ಸಂಚಾರಕ್ಕೆ ತೊಡಕು ಉಂಟಾಗಿದೆ. ಅಂಧೇರಿಯಲ್ಲಿ ರೈಲ್ವೆ ಅಂಡರ್‌ಪಾಸ್ ಮುಳುಗಡೆಯಾಗಿದೆ. ಪನ್ವೆಲ್‌ನ ಅಟಲ್ ಸೇತು ಹೆದ್ದಾರಿಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. 250 ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, 100ಕ್ಕೂ ಹೆಚ್ಚು ಬಸ್ ಮಾರ್ಗಗಳನ್ನು ಬದಲಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಳೆ, ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಹವಾಮಾನ ಇಲಾಖೆ, ಶೈಕ್ಷಣಿಕ ಸಂಸ್ಥೆಗಳು ಹಾಗೂ ವಿಪತ್ತು ನಿರ್ವಹಣಾ ತಂಡದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಸಚಿವರಿಗೆ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಅಗತ್ಯ ಪ್ರದೇಶಗಳಲ್ಲಿ ನಾಗರಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಅದಲ್ಲದೇ ಆ.21ರ ನಡುವೆ ರಾಜ್ಯದ ಹಲವಾರು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಿ, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಆದ್ಯತೆ ವಹಿಸಬೇಕು ಎಂಬ ಸೂಚನೆ ನೀಡಲಾಗಿದೆ.
ಇನ್ನೂ ಮುಂಬೈನಲ್ಲಿ ಭಾರೀ ಮಳೆ ಹಿನ್ನೆಲೆ ಪುಣೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ ಮತ್ತು ಪುಣೆಯ ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಕೊಂಕಣ ಪ್ರದೇಶದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಮಳೆಗೆ 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಾಶವಾಗಿದೆ. ಸುಮಾರು 800 ಹಳ್ಳಿಗಳ ಮೇಲೆ ಮಳೆ ವ್ಯತಿರಿಕ್ತ ಪರಿಣಾಮ ಬೀರಿದೆ.ಇದನ್ನೂ ಓದಿ: ಎಸ್‌ಸಿ ಒಳಮೀಸಲಾತಿ ಜಾರಿಗೆ ವಿಶೇಷ ಸಭೆ; 101 ಜಾತಿಗಳಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ