ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

1 Min Read

ತುಮಕೂರು: ಕಲಬುರಗಿ ಜಿಲ್ಲಾ ಕ್ರೀಡಾಂಗಣದ ದುರವಸ್ಥೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ತುಮಕೂರಿನ ಶಕುಂತಲಾ ನಟರಾಜ್ (Shakuntala Nataraj) ಮತ್ತು ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣದ ವಿರುದ್ಧ ದಾಖಲಿಸಿರುವ ಎಫ್‌ಐಆ‌ರ್ ಹಾಗೂ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪ್ರಕರಣ ರದ್ದುಕೋರಿ ಶಕುಂತಲಾ ನಟರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ) ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಶಕುಂತಲಾ ನಟರಾಜ್ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿ, ‘ಅರ್ಜಿದಾರರ ವಿರುದ್ದ ರಾಜಕೀಯ ದ್ವೇಷದಿಂದ ಈ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆಡಳಿತಾರೂಢ ಪಕ್ಷದ ಪದಾಧಿಕಾರಿ ಮುಖಾಂತರ ಈ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು ಇದನ್ನು ರದ್ದುಪಡಿಸಬೇಕು’ ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದಂತೆ ಕಲಬುರಗಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಪ್ರತಿವಾದಿ ರಾಜ್ಯ ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಲಾಗಿದೆ.

Share This Article